ನವದಹಲಿ,ಅ.14- ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಹೆಚ್ . ಮುನಿಯಪ್ಪ ತಿಳಿಸಿದರು .
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜನಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರಮಾಣ ಶೇ.24.1ರಷ್ಟಿದೆ. ಜನಗಣತಿ ಹಾಗೂ ವಿವಿಧ ಆಯೋಗಗಳ ವರದಿಗಳ ಆಧಾರದ ಮೇಲೆ ಮೀಸಲಾತಿ ಪ್ರಮಾಣವನ್ನು ನಿರ್ಧರಿಸುವುದು ಅಗತ್ಯವಾಗಿದೆ. ಈ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು.
ನಾಗಮೋಹನ ದಾಸ್ ಆಯೋಗ ಸೇರಿದಂತೆ ವಿವಿಧ ಆಯೋಗಗಳ ವರದಿಗಳನ್ನು ಆಧರಿಸಿ ಮೀಸಲಾತಿ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಪರಿಶಿಷ್ಟ ಜಾತಿಗಳಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.7ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಒಟ್ಟು ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸಲಾಗಿತ್ತು.
ಈ ನಿರ್ಧಾರವನ್ನು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿತ್ತು. ನಂತರ ನಮ ಸರ್ಕಾರವೂ ಅದನ್ನು ಮುಂದುವರಿಸಿತ್ತು ಎಂದು ವಿವರಿಸಿದರು. ಕರ್ನಾಟಕದಲ್ಲಿಯೂ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು 9ನೇ ಅನುಸೂಚಿಗೆ ಸೇರಿಸುವ ಕುರಿತು ಹಿಂದಿನ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದ್ದರೆ, ಇಂದಿನ ಸಮಸ್ಯೆಯನ್ನು ತಪ್ಪಿಸುವ ಅವಕಾಶವಿತ್ತು ಎಂದು ಅಭಿಪ್ರಾಯಪಟ್ಟರು.
ಒಳಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಲ್ಲಿ ವಿವಿಧ ಸಮುದಾಯಗಳಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಒಳಮೀಸಲಾತಿ ವ್ಯವಸ್ಥೆಯನ್ನು ರೂಪಿಸಲಾಗಿದೆ. ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ಪ್ರಮಾಣದೊಳಗೆ ಮುಂದುವರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.
ಮೀಸಲಾತಿ ಹೆಚ್ಚಳದ ನಿರ್ಧಾರಕ್ಕೆ ಸಂವಿಧಾನಾತಕ ರಕ್ಷಣೆ ದೊರೆಯುವಂತೆ ಮಾಡುವುದು ಅತ್ಯಗತ್ಯವಾಗಿತ್ತು. ಹಿಂದಿನ ಸರ್ಕಾರವು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ ನಂತರ ಅದಕ್ಕೆ ಅಗತ್ಯವಾದ ಕಾನೂನು ರಕ್ಷಣೆ ಕಲ್ಪಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಆ ಕ್ರಮ ಸಮರ್ಪಕವಾಗಿ ಪೂರ್ಣಗೊಳ್ಳದಿರುವುದರಿಂದ ಈಗಿನ ಗೊಂದಲಕ್ಕೆ ಕಾರಣವಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಮಾಜಿ ಸಚಿವ ಚಂದ್ರಪ್ಪ,ನಿಗಮದ ಅಧ್ಯಕ್ಷರು ಉಪಸ್ಥಿತರಿದ್ದರು.
