ಬೆಂಗಳೂರು, ಅ.14- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೆದ್ದಾರಿ ಬಂದ್ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ, ಸಂಚಾರಕ್ಕೆ ನಿಗದಿಪಡಿಸಿರುವ ಪರ್ಯಾಯ ಮಾರ್ಗಗಳನ್ನೂ ಬಂದ್ ಮಾಸುವುದು ಮತ್ತು ರೈಲು ತಡೆ ನಡೆಸುವಂತಹ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಚಿಕ್ಕೋಡಿ, ಹಾವೇರಿಯ ಬಂಕಾಪುರ, ಬಾಗಲಕೋಟೆ, ವಿಜಯಪುರ, ಗದಗ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆಗಳಲ್ಲಿ ರೈತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆದ್ದಾರಿಗಳ ಮಧ್ಯಭಾಗದಲ್ಲಿ ಟೆಂಟ್ಗಳನ್ನು ನಿರ್ಮಿಸಿಕೊಂಡು ಹಗಲು-ರಾತ್ರಿ ಧರಣಿ ನಡೆಸುತ್ತಿರುವ ರೈತರು, ರಸ್ತೆಯಲ್ಲೇ ಅಡುಗೆ ಮಾಡಿ ಸಾಮೂಹಿಕ ಭೋಜನ ಮಾಡುತ್ತಿದ್ದಾರೆ. ರಾತ್ರಿ ಇಡೀ ಭಜನೆಗಳನ್ನು ನಡೆಸುವ ಮೂಲಕ ತಮ ಹೋರಾಟವನ್ನು ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಹೆದ್ಧಾರಿಯಲ್ಲಿ ತಮಟೆ ಹೊಡೆದು, ಪೊರಕೆ ಹಿಡಿದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಹಾಲಿನ ಟ್ಯಾಂಕರ್ಗಳ ಸಂಚಾರಕ್ಕೂ ರೈತರು ಅಡ್ಡಿಪಡಿಸಿದ್ದಾರೆ. ಆರಂಭದಲ್ಲಿ ಅಗತ್ಯ ವಸ್ತುಗಳ ಸಾಗಣೆಗೆ ನೀಡಲಾಗಿದ್ದ ವಿನಾಯಿತಿಯೂ ಕ್ರಮೇಣ ಕಡಿಮೆಯಾಗುತ್ತಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿರುವುದರಿಂದ ರಸ್ತೆಯುದ್ದಕ್ಕೂ ಭಾರಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪ್ರವಾಸಿ ವಾಹನಗಳು ಹಾಗೂ ಲಘು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಪೊಲೀಸರು ಪರ್ಯಾಯ ಮಾರ್ಗಗಳನ್ನು ಕಲ್ಪಿಸಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಪರ್ಯಾಯ ಮಾರ್ಗಗಳನ್ನು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾವು ಹೆದ್ಧಾರಿ ಬಂದ್ ಮಾಡಿದ್ದರೆ, ನಮದೇ ಹೊಲಗಳ ಮೇಲೆ ಪರ್ಯಾಯ ಸಂಚಾರ ವ್ಯವಸ್ಥೆ ಮಾಡಲಾಗಿದೆ. ನಮ ಜಮೀನುಗಳಿಗೆ ನೀರು ಹಾಯಿಸಿ, ಉಳುಮೆ ಮಾಡಿ, ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುವುದಾಗಿಯೂ ಎಚ್ಚರಿಕೆ ನಿಡಿದ್ದಾರೆ.ಈಗಾಗಲೇ ಹೆದ್ದಾರಿಗಳಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ, ರೈಲು ತಡೆಯ ಎಚ್ಚರಿಕೆಯೂ ಹೊರಬಿದ್ದಿರುವುದು ಸಂಚಾರ ವ್ಯವಸ್ಥೆಯ ಮೇಲೆ ಮತ್ತಷ್ಟು ಪರಿಣಾಮ ಬೀರುವ ಆತಂಕಕ್ಕೆ ಕಾರಣವಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹಂತದಲ್ಲಿ ರೈಲು ಸಂಚಾರವನ್ನು ತಡೆಹಿಡಿಯಲಾಗುವುದು ಎಂದು ಎಚ್ಚರಿಸಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮುಂದಿನ ಹಂತದಲ್ಲಿ ಮಹಿಳೆಯರೂ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಲ್ಹಾದ್ ಜೋಶಿ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದು, ಅವರು ರಾಜೀನಾಮೆ ನೀಡುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಗುಂಡು ಹಾರಿಸಿದರೂ ನಾವು ಹೆದರುವುದಿಲ್ಲ. ಪ್ರತಿ ಕೆಜಿ ಸಕ್ಕರೆಗೆ ಗರಿಷ್ಠ ಮಾರಾಟ ಬೆಲೆಯನ್ನು 60 ರೂಪಾಯಿಗೆ ನಿಗದಿಪಡಿಸಬೇಕು. ಆಗ ಕಬ್ಬಿಗೆ ಬೆಲೆ ಹೆಚ್ಚಾಗಲಿದೆ. ಎಫ್ ಆರ್ ಪಿ ಅಡಿ ಪ್ರತಿ ಟನ್ ಕಬ್ಬಿಗೆ 6,500 ರೂಪಾಯಿ ಬೆಲೆ ನೀಡಬೇಕು, ರಾಜ್ಯದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಶೇ.25ರಷ್ಟು ಮಾತ್ರ ಖರೀದಿಸಲಾಗುತ್ತಿದೆ. ಗುಜರಾತ್ ಹಾಗೂ ಇತರ ರಾಜ್ಯಗಳಲ್ಲಿ ಉತ್ಪಾದನೆಯಾಗುವ ಎಥೆನಾಲ್ ನಲ್ಲಿ ಬಹುಭಾಗವನ್ನು ಕೇಂದ್ರ ಸರ್ಕಾರ ಖರೀದಿಸುತ್ತಿದೆ. ಕರ್ನಾಟಕದಲ್ಲಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಶೇ.100ರಷ್ಟು ಕೇಂದ್ರ ಸರ್ಕಾರವೇ ನೇರವಾಗಿ ಖರೀದಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
ಈ ಬೇಡಿಕೆಗಳು ಈಡೇರಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು. ಇಲ್ಲದಿದ್ದರೆ ಜನಾಂದೋಲನವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರೂಪಾಯಿ ನೀಡಬೇಕು ಎಂಬ ಬೇಡಿಕೆಯನ್ನೂ ರೈತರು ಮುಂದಿಟ್ಟಿದ್ದಾರೆ. ಕಬ್ಬಿನ ತೂಕದಲ್ಲಿ ನಡೆಯುತ್ತಿರುವ ವಂಚನೆಯನ್ನು ತಡೆಯಲು 500 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು. ರೈತರಿಗೆ ತ್ರಿಫೇಸ್ ವಿದ್ಯುತ್ ಪೂರೈಕೆಯನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನಾ ನಿರತ ರೈತ ಮುಖಂಡರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರ ಬೇಡಿಕೆಗಳಿಗೆ ಸ್ಪಂದಿಸಲು ಸಾಧ್ಯವಾಗದಿದ್ದರೆ ಆ ಹುದ್ದೆಯಲ್ಲಿ ಮುಂದುವರಿಯುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. ರಾಜೀನಾಮೆ ನೀಡಿ ಮನೆಗೆ ತೆರಳಲಿ ಎಂದು ಸವಾಲು ಹಾಕಿದ್ದಾರೆ.ಯಾವುದೇ ಕಾರಣಕ್ಕೂ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ. ರೈತರ ಹೋರಾಟವನ್ನು ಹಗುರವಾಗಿ ಪರಿಗಣಿಸಿದರೆ ಅದರ ಪರಿಣಾಮ ಇನ್ನಷ್ಟು ತೀವ್ರವಾಗಲಿದೆ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
