ಮೈಸೂರು, ಅ.17 – ಕಳೆದ ವರ್ಷ ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ನಗರಿಯನ್ನು ಬೆಚ್ಚಿಬೀಳಿಸಿದ್ದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ.ನಗರದ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ ಅಲಿಯಾಸ್ ಗರಡಿಗೆ ಶಿಕ್ಷೆಗೊಳಗಾದ ಅಪರಾಧಿ. ಈತ ಮೈಸೂರು-ಕೊಳ್ಳೆಗಾಲ ಮಾರ್ಗದ ಬಸ್ನಲ್ಲಿ ಕ್ಲೀನರ್ ಕೆಲಸ ಮಾಡಿಕೊಂಡಿದ್ದನು.
ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಆನಂದ್ ಪಿ. ಹೂಗಾಡೆ ಅವರು ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ತಪ್ಪಿತಸ್ಥ ಎಂದು ಪರಿಗಣಿಸಿ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ.ಈ ಹಿಂದೆ ನ್ಯಾಯಾಲಯ ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿ ಮರಣದಂಡನೆ ವಿಧಿಸಿದೆ.
ಕಳೆದ ವರ್ಷ ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಕಲಬುರಗಿಯಿಂದ ಬಲೂನ್ ಮಾರಲು ಪೋಷಕರೊಂದಿಗೆ ಬಂದಿದ್ದ 9 ವರ್ಷದ ಬಾಲಕಿ, ದಸರಾ ವಸ್ತು ಪ್ರದರ್ಶನದ ಸಮೀಪ ತಾತ್ಕಾಲಿಕ ಟೆಂಟ್ನಲ್ಲಿ ರಾತ್ರಿ ತಂಗುತ್ತಿದ್ದರು. ಅಂದು ಕುಟುಂಬ ಸದಸ್ಯರೊಂದಿಗೆ ಬಾಲಕಿ ನಿದ್ರಿಸುತ್ತಿದ್ದಾಗ ಆರೋಪಿ ಆಕೆಯನ್ನು ಎಳೆದೊಯ್ದು ಅತ್ಯಾಚಾರ ವೆಸಗಿ ಕೊಲೆ ಮಾಡಿ ಪೊದೆಯಲ್ಲಿ ಶವ ಬಿಸಾಕಿ ಪರಾರಿಯಾಗಿದ್ದನು.
ಈ ಘಟನೆ ಕೇವಲ ಮೈಸೂರು ಮಾತ್ರವಲ್ಲದೇ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ನಜರ್ಬಾದ್ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಪತ್ತೆಹಚ್ಚಿದರು.
ಬಂಧನ ವೇಳೆ ಪರಾರಿಗೆ ಯತ್ನ – ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿ ಕಾರ್ತಿಕ್ ನನ್ನು ಬಂಧಿಸಲು ತೆರಳಿದ್ದ ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಆತನನ್ನು ನಿಯಂತ್ರಿಸಲು ಪೊಲೀಸರು ಆತರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದರು. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ ಬಲವಾದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ವಿಶೇಷ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.ಪ್ರಕರಣದ ವಿಚಾರಣೆ ನಡೆಸಿದ ಶೀಘ್ರಗತಿ ವಿಶೇಷ ನ್ಯಾಯಾಲಯ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿ ಕಾರ್ತಿಕ್ ಅಪರಾಧವೆಸಗಿರುವುದು ಸಾಬೀತಾಗಿರುವುದು ಕಂಡು ಬಂದ ಹಿನ್ನಲೆಯಲ್ಲಿ ಗಲ್ಲು ಶಿಕ್ಷೆಯನ್ನು ಪ್ರಕಟಿಸಿ ತೀರ್ಪು ನೀಡಿದೆ.
