ಬೆಂಗಳೂರು,ಅ.23- ಆಡಳಿತಾರೂಢ ಕಾಂಗ್ರೆಸ್ ಹಾಗೂ ಎನ್ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ ವಿಧಾನ ಪರಿಷತ್ತಿನ ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭವಾಗಿದ್ದು, ಬಹುತೇಕ ಶಾಂತಿಯುತ ಹಾಗೂ ಬಿರುಸಿನ ಮತದಾನವಾಗುತ್ತಿದೆ.
ಮೋಡ ಕವಿದ ವಾತಾವರಣದ ನಡುವೆ ಶಿಕ್ಷಕರ, ಪದವೀಧರ ಮತದಾರರು ಬೆಳಿಗ್ಗೆಯಿಂದ ಮತಗಟ್ಟೆಗಳಿಗೆ ಬಂದು ಸರದಿ ಸಾಲಿನಲ್ಲಿ ನಿಂತು ತಮ ತಮ ಮತ ಚಲಾಯಿಸುತ್ತಿದ್ದ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂದಿತು.
ಮಾಜಿ ಉಪ ಸಭಾಪತಿ ಪುಟ್ಟಣ್ಣ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಸಂಕನೂರ, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ ಸೇರಿದಂತೆ 43 ಅಭ್ಯರ್ಥಿಗಳ ಭವಿಷ್ಯವನ್ನು ಶಿಕ್ಷಕರ ಹಾಗೂ ಪದವೀಧರ ಮತದಾರರು ಬರೆದಿದ್ದಾರೆ. ಅ.27ರಂದು ನಾಲ್ಕು ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ.
ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ, ಪಶ್ಚಿಮ ಪದವೀಧರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ವ್ಯಾಪ್ತಿಯ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಮತದಾನ ಕೇಂದ್ರಗಳಲ್ಲಿ ಇಂದು ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಸಂಜೆ ನಾಲ್ಕು ಗಂಟೆಯವರೆಗೆ ನಡೆಯಲಿದೆ. ಮುಕ್ತ ಹಾಗೂ ನ್ಯಾಯ ಸಮತ ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣಾ ಆಯೋಗ ಸೂಕ್ತ ಪೊಲೀಸ್ ಭದ್ರತೆ ಒದಗಿಸಿದೆ. ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತವಾಗಿರುವುದರಿಂದ ಮತಪತ್ರಗಳನ್ನು ಬಳಸಲಾಗಿದೆ.
ಕಳೆದ ಲೋಕಸಭೆ ಚುನಾವಣೆಯಂತೆ ವಿಧಾನ ಪರಿಷತ್ತಿನ ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ತಮ ತಮ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಿದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ, ಜೆಡಿಎಸ್ನಿಂದ ಎ.ಪಿ.ರಂಗನಾಥ ಸೇರಿದಂತೆ ಒಟ್ಟು ಆರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶರಣಪ್ಪ ಮಟ್ಟೂರು, ಬಿಜೆಪಿಯಿಂದ ಶಶೀಲ್ ಜಿ.ನಮೋಶಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶಶಿ ಹುಲಿಕುಂಟೆಮಠ್, ಬಿಜೆಪಿಯಿಂದ ಕೆ.ಎಂ.ಸುರೇಶ ಅವರು ಸೇರಿದಂತೆ 10 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮೋಹನ ಲಿಂಬಿಕಾಯಿ, ಬಿಜೆಪಿಯಿಂದ ಸಂಕನೂರ ಎಸ್.ವಿ. ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಸಂಕನೂರ ಎಸ್.ವಿ., ಶಶೀಲ್ ಜಿ.ನಮೋಶಿ, ಪುಟ್ಟಣ್ಣ ಅವರು ನವೆಂಬರ್ 11ರಂದು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ನಿವೃತ್ತಿಯಾಗಲಿದ್ದು, ನಿವೃತ್ತಿಯಿಂದ ತೆರವಾಗುವ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ನಡೆಸುತ್ತಿದೆ. ಅಕ್ಟೋಬರ್ 31ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಚುನಾವಣಾ ನೀತಿ ಸಂಹಿತೆಯು ಅಂತ್ಯಗೊಳ್ಳಲಿದೆ.
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ
ನಾಗರಬಾವಿಯ ಅಂಬೇಡ್ಕರ್ ಕಾಲೇಜು ಮತಗಟ್ಟೆ ಸಮೀಪ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮತಗಟ್ಟೆ ಸಮೕಪ ಎರಡು ಪಕ್ಷದ ಕಾರ್ಯಕರ್ತರು,ಮುಖಂಡರು ಜಮಾಯಿಸಿದ್ದರು. ಕೊಟ್ಟಿಗೆಪಾಳ್ಯದ ಮಾಜಿ ಪಾಲಿಕೆ ಸದಸ್ಯ,ಕಾಂಗ್ರೆಸ್ನ ಮೋಹನ್ ಕುಮಾರ್ ಹಾಗೂ ಬಿಜೆಪಿ ಮುಖಂಡರ ನಡೆವೆ ಪ್ರಚಾರದ ವೇಳೆ ಮಾತಿನ ಚಕಮಕಿ ನಡೆದಿದೆ.
ಶಾಸಕ ಮುನಿರತ್ನ ಅವರು ಸ್ಥಳಕ್ಕೆ ಬಂದ ನಂತರ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ತೀವ್ರಗೊಂಡು ಗಲಾಟೆಯ ಜೋರಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ ಬರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮತಗಟ್ಟೆಯಲ್ಲಿ ಸದ್ಯ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ .
