ಬೆಂಗಳೂರು, ಅ. 24- ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮತಿ ನೀಡಿದ್ದಾರೆ .
ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೆಪ್ಟೆಂಬರ್ನಲ್ಲಿ ಗಂಗ್ವಾರ್ ಅವರನ್ನು ಅಮಾನತುಗೊಳಿಸಿತ್ತು.ಜ್ಞಾನೇಂದ್ರ ಕುಮಾರ್ ಗಂಗ್ವಾ,ರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ ಕಡತ ಮತ್ತು ಅದರಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದ್ದೇನೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್), 2023ರ ಸೆಕ್ಷನ್ 218ರ ಅಡಿಯಲ್ಲಿ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಲಾಗಿದೆ,ಎಂದು ಶಿವಕುಮಾರ್ ತಮ ಆದೇಶದಲ್ಲಿ ತಿಳಿಸಿದ್ದಾರೆ.
ಗಂಗ್ವಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣದ ಅಕ್ರಮಗಳ ಕುರಿತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ಜಾರಿ ನಿರ್ದೇಶನಾಲಯವೂ (ಇಡಿ) ಪ್ರತ್ಯೇಕ ತನಿಖೆ ಕೈಗೊಂಡಿದೆ.ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಆಗಸ್ಟ್ 29ರಂದು ಗಂಗ್ವಾರ್ ಅವರನ್ನು ಬಂಧಿಸಿತ್ತು. ಅವರು 2024ರ ಫೆಬ್ರವರಿಯಿಂದ 2026ರ ಮಾರ್ಚ್ವರೆಗೆ ಕೆಪಿಎಸ್ಸಿಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು.
2016ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಗಂಗ್ವಾರ್ ಬಂಧನದ ಸಂದರ್ಭದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಪರೀಕ್ಷೆಯ ದಾಖಲೆಗಳು ಹಾಗೂ ಒಎಂಆರ್ ಶೀಟ್ಗಳ ನಿರ್ವಹಣೆ ಸೇರಿದಂತೆ ಹಲವು ಅಂಶಗಳಲ್ಲಿ ಅಕ್ರಮ ನಡೆದಿರುವ ಆರೋಪಗಳ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಇತರ ವ್ಯಕ್ತಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ.
