ಬೆಂಗಳೂರು, ಅ.27 -ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ನೇರ ಹಣಾಹಣಿ ನಡೆದಿದ್ದ ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಪ್ರಾರಂಭವಾಗಿದೆ.
ನಗರದ ಸರ್ಕಾರಿ ಕಲಾ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಆಗ್ನೇಯ ಪದವೀಧರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಮತ ಎಣಿಕೆ ಕೇಂದ್ರದಲ್ಲಿ ಪ್ರಾರಂಭವಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಮತ ಎಣಿಕೆಯು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಮತ ಎಣಿಕೆ ಕೇಂದ್ರದಲ್ಲಿ ನಡೆಯುತ್ತಿದೆ. ಪ್ರಾಶಸ್ತ್ಯದ ಮತ ಚಲಾವಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ವಿಳಂಬವಾಗುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಫಲಿತಾಂಶ ದೊರೆಯುವ ನಿರೀಕ್ಷೆ ಇದೆ.
ಅಕ್ಟೋಬರ್ 23 ರಂದು ಮತದಾನ ನಡೆದ ನಾಲ್ಕು ಕ್ಷೇತ್ರಗಳಾದ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಶೇ.73.58 ರಷ್ಟು ಮತ್ತು ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಶೇ.75.62 ರಷ್ಟು ಮತದಾನವಾಗಿತ್ತು.ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.86.97 ರಷ್ಟು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ. 81.98 ರಷ್ಟು ಮತದಾನವಾಗಿತ್ತು.
ಈ ಚುನಾವಣೆಯು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟದ ನಡುವಿನ ಸಮನ್ವಯಕ್ಕೆ ಮತ್ತು ಪದವೀಧರರು ಹಾಗೂ ಶಿಕ್ಷಕರ ವಲಯದಲ್ಲಿ ಆಡಳಿತ ಪಕ್ಷಕ್ಕಿರುವ ಬೆಂಬಲಕ್ಕೆ ಒಂದು ಪರೀಕ್ಷೆಯಾಗಿದೆ. ಒಟ್ಟು ನಾಲ್ಕು ಕ್ಷೇತ್ರಗಳಿಂದ ಒಟ್ಟು 43 ಅಭ್ಯರ್ಥಿಗಳು ಕಣದಲ್ಲಿದ್ದರು. ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಅದರ ಮಿತ್ರಪಕ್ಷವಾದ ಜೆಡಿಎಸ್ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದೆ.
ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶಶಿ ಹುಲಿಕುಂಟೆ ಮಠ ಅವರು ಬಿಜೆಪಿಯ ಕೆ.ಎಂ. ಸುರೇಶ್ ಅವರ ವಿರುದ್ಧ ಸ್ಪರ್ಧಿಸಿದ್ದರು. ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಮೋಹನ್ ಲಿಂಬಿಕಾಯಿ ಅವರು ಹಾಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರ ವಿರುದ್ಧ ಸ್ಪರ್ಧಿಸಿದ್ದರು.
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶರಣಪ್ಪ ಮಟ್ಟೂರು ಅವರು ಬಿಜೆಪಿಯ ಹಾಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಅವರ ವಿರುದ್ಧ ಸ್ಪರ್ಧಿಸಿದರು. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ ಅವರ ವಿರುದ್ಧ ಕಣಕ್ಕಿಳಿದಿದ್ದರು.
ಬೆಂಗಳೂರು ಕ್ಷೇತ್ರವು ವಿಶೇಷ ಮಹತ್ವ ಪಡೆದಿದೆ, ಏಕೆಂದರೆ ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಪುಟ್ಟಣ್ಣ ಅವರು ಜೆಡಿಎಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸಿ ಚುನಾಯಿತರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. ಬಳಿಕ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ ಅವರು ಮತ್ತು ರಂಗನಾಥ ಅವರನ್ನು ಮಣಿಸಿ ಚುನಾಯಿತರಾಗಿದ್ದರು.
ಈ ಚುನಾವಣಾ ಫಲಿತಾಂಶಗಳು ರಾಜ್ಯ ಸರ್ಕಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲದಿದ್ದರೂ, ವಿರೋಧ ಪಕ್ಷಗಳ ಮೈತ್ರಿಕೂಟವು ಉತ್ತಮ ಫಲಿತಾಂಶ ಪಡೆದರೆ, 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜಕೀಯ ಅಸ್ತ್ರವಾಗಿ ಬಳಸಬಹುದು.75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಪ್ರಸ್ತುತ 38 ಕಾಂಗ್ರೆಸ್ ಸದಸ್ಯರು, 24 ಬಿಜೆಪಿ ಸದಸ್ಯರು, ಆರು ಜೆಡಿಎಸ್ ಸದಸ್ಯರು, ಒಬ್ಬ ಪಕ್ಷೇತರ ಸದಸ್ಯ ಮತ್ತು ಸಭಾಪತಿ ಸಲೀಂ ಅಹದ್ ಇದ್ದಾರೆ. ಸರ್ಕಾರದ ನಾಮನಿರ್ದೇಶನಕ್ಕೆ ಮೀಸಲಾದ ಐದು ಸ್ಥಾನಗಳು ಖಾಲಿ ಇವೆ. ಖಾಲಿ ಇರುವ ಸ್ಥಾನಗಳು ಭರ್ತಿಯಾದಾಗ ಕಾಂಗ್ರೆಸ್ನ ಬಲ ಹೆಚ್ಚಾಗುವ ನಿರೀಕ್ಷೆಯಿದೆ.
