ಬೆಂಗಳೂರು, ನ.11- ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಒಂದೇ ಕುಟುಂಬದ ಏಳು ಮಂದಿಯ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ಕುಮಾರ್ ಸಿಂಗ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣಕ್ಕೆ ಬೇಕಾದ ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಬೇಗ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಹೇಳಿದರು. ಆರೋಪಿಗೆ ಶಿಕ್ಷೆ ಕೊಡಿಸಲು ಫಾಸ್ಟ್ಟ್ರ್ಯಾಕ್ ಕೋರ್ಟ್ ತೆರೆಯುವಂತೆ ಸರ್ಕಾರಕ್ಕೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಮೂಲಕ ಮನವಿ ಮಾಡಲಾಗುವುದು.
ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತೀವ್ರ ತನಿಖೆ ಕೈಗೊಂಡಾಗ ಏಳು ಮಂದಿಯ ಕೊಲೆ ಬೆಳಕಿಗೆ ಬಂತು. ನಾವು ಎಲ್ಲ ಏಳೂ ಶವಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ನೀಡಿದ್ದೇವೆ ಎಂದು ಹೇಳಿದರು. ಆರೋಪಿಯನ್ನು ತೀವ್ರ ವಿಚಾರಣೆಗೊಳಪಡಿಸಿ ಕೊಲೆಗೆ ಮೂಲ ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದರು.
