ಬೆಂಗಳೂರು,ಏ.21- ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪ್ರಶ್ನೆಪತ್ರಿಕೆಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.27 ರ ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಿಇಟಿಯ ಪ್ರಶ್ನೆಪತ್ರಿಕೆಗಳಿಗೆ ಸದ್ಯದಲ್ಲೇ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಏ.18 ಮತ್ತು 19 ರಂದು ನಡೆದ ಜೀವಶಾಸ್ತ್ರ ಮತ್ತು ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ಇ-ಮೇಲ್ ಮೂಲಕ ಕೆಇಎ ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆಪತ್ರಿಕೆಯ ಪ್ರಶ್ನೆಗಳ ಸಂಖ್ಯೆ, ವಿವರಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸಿಇಟಿ ಪರೀಕ್ಷೆ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪಿಯುಸಿ ಪಠ್ಯಕ್ರಮದಲ್ಲಿ ಇಲ್ಲದಂತಹ ಪ್ರಶ್ನೆಗಳನ್ನು ಕೇಳಲಾಗಿದೆ, ಕೆಲವರು ಮರುಪರೀಕ್ಷೆಗೆ ಒತ್ತಾಯಿಸಿದ್ದರೆ, ಮತ್ತೆ ಕಲವರು ಕೃಪಾಂಕ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ನೀಡಿರುವ ಗಡುವು ಮುಗಿದ ನಂತರ ವಿಷಯ ತಜ್ಞರ ಸಭೆ ನಡೆಸಿ ಕೆಇಎ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಏ.18ರಂದು ಜೀವಶಾಸ್ತ್ರ ಮತ್ತು ಗಣಿತ, 19 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆದಿದ್ದು, ನಿನ್ನೆ ಹೊರನಾಡ ಹಾಗೂ ಗಡಿನಾಡ ಕನ್ನಡಿಗರ ಅಭ್ಯರ್ಥಿಗಳಿಗಾಗಿ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿದೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆದಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದರು. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 3,18,865 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆ ಬರೆದಿದ್ದರು.