ಬೆಂಗಳೂರು,ನ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳನ್ನು ಪರಿಣಾಮ ಕಾರಿಯಾಗಿ ನಿರ್ವಹಿಸಲು ಕರ್ನಾಟಕ ಸರ್ಕಾರವು ವಿವಿಧ ಇಲಾಖೆಗಳ ಜವಾಬ್ದಾರಿಗಳನ್ನು ಸ್ಪಷ್ಟಪಡಿಸಿ ನಿರ್ದೇಶನ ನೀಡಿದೆ.
ಮಾನವ ಜೀವಹಾನಿ ಸಂಭವಿಸಿದ ಸಂದರ್ಭ ಹಾಗೂ ವನ್ಯಪ್ರಾಣಿಗಳ ರಕ್ಷಣಾ ಮತ್ತು ಪುನರ್ವಸತಿ ಕಾರ್ಯಾಚರಣೆ ಗಳಲ್ಲಿ ಅರಣ್ಯ, ಕಂದಾಯ, ಪೊಲೀಸ್, ಆರೋಗ್ಯ, ಪಶುವೈದ್ಯ, ಪಂಚಾಯತ್ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಸರ್ಕಾರದ ಸಚಿವಾಲಯದಿಂದ ಹೊರಡಿಸಿರುವ ಸುತ್ತೋಲೆಯಲ್ಲಿ, ಮಾನವ?ವನ್ಯಜೀವಿ ಸಂಘರ್ಷ ಪ್ರಕರಣಗಳ ನಿರ್ವಹಣೆಯಲ್ಲಿ ಏಕರೂಪತೆ ಹಾಗೂ ಅಧಿಕಾರಿಗಳ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ನಿಗದಿಪಡಿಸುವ ಅಗತ್ಯವನ್ನು ಒತ್ತಿ ಹೇಳಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ರಾಜ್ಯದ ವಿವಿಧೆಡೆ ನಡೆದ ಮಾನವ?ವನ್ಯಜೀವಿ ಸಂಘರ್ಷ ಘಟನೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಸುತ್ತೋಲೆಯಲ್ಲಿ, ಮಾನವ ಸಾವಿನ ಪ್ರಕರಣಗಳಲ್ಲಿ ಕಂದಾಯ ಇಲಾಖೆ ಸ್ಥಳದಲ್ಲೇ ಹಾಜರಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸ ಲಾಗಿದೆ. ತಹಶೀಲ್ದಾರ್ ಮತ್ತು ಸಹಾಯಕ ಆಯುಕ್ತರು ತಮ ವ್ಯಾಪ್ತಿಯ ಅಧಿಕಾರವನ್ನು ಬಳಸಿಕೊಂಡು ಅಗತ್ಯ ಆದೇಶಗಳನ್ನು ಹೊರಡಿಸಬೇಕು. ಮೃತರ ಕಾನೂನುಬದ್ಧ ವಾರಸುದಾರರನ್ನು ಗುರುತಿಸಿ, ಅರಣ್ಯ ಇಲಾಖೆಯಿಂದ ನೀಡಲಾಗುವ ಪರಿಹಾರಧನವನ್ನು ಅವರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ.
ಪೊಲೀಸ್ ಇಲಾಖೆಗೆ ಪ್ರಮುಖ ಜವಾಬ್ದಾರಿ
ಮಾನವ ಸಾವಿನ ಪ್ರಕರಣಗಳಲ್ಲಿ ಪೊಲೀಸರು ಎಫ್ಐಆರ್ ಅಥವಾ ಯುಡಿಆರ್ ದಾಖಲಿಸಿ, ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಬೇಕು. ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಜನಸಂದಣಿ ನಿಯಂತ್ರಿಸುವುದು ಹಾಗೂ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ವನ್ಯಜೀವಿಗಳ ದಾಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂರಕ್ಷಿಸಲು ಅರಣ್ಯ ಇಲಾಖೆ ಮತ್ತು ವಿಧಿವಿಜ್ಞಾನ ಅಧಿಕಾರಿಗಳಿಗೆ ಪೊಲೀಸರು ಸಹಕರಿಸಬೇಕು. ಮೃತದೇಹ ಹಾಗೂ ಘಟನಾ ಸ್ಥಳದ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.
ವನ್ಯಪ್ರಾಣಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯೇ ಕಾರ್ಯಾಚರಣೆಯನ್ನು ಮುನ್ನಡೆಸಬೇಕು. ರಕ್ಷಿಸಲಾದ ಪ್ರಾಣಿಯನ್ನು ಸಾಗಿಸಲು ಅಗತ್ಯ ವಾಹನದ ವ್ಯವಸ್ಥೆ ಮಾಡಬೇಕು. ಕಾರ್ಯಾಚರಣೆಯ ವೇಳೆ ಸಾರ್ವಜನಿಕರ ಸುರಕ್ಷತೆಗಾಗಿ `ನೋ-ಗೋ ಝೋನ್’ಗಳನ್ನು ಗುರುತಿಸಿ, ಅವುಗಳ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಲಾಗಿದೆ.
ವನ್ಯಪ್ರಾಣಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಣ್ಯ ಇಲಾಖೆ ಗುರುತಿಸುವ ನೋ-ಗೋ ಝೋನ್ಗಳಿಗೆ ಸಾರ್ವಜನಿಕರು ಪ್ರವೇಶಿಸದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜನಸಂದಣಿ ನಿಯಂತ್ರಿಸುವುದರ ಜತೆಗೆ, ರಕ್ಷಿಸಲಾದ ವನ್ಯಪ್ರಾಣಿ, ಆಂಬ್ಯುಲೆನ್್ಸ ಹಾಗೂ ಅಧಿಕೃತ ವಾಹನಗಳ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಮಾರ್ಗವನ್ನು ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ.
