ಬೆಂಗಳೂರು, ನ.17- ಅತಿವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿನಿಯರನ್ನು ನಗರದ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಜಾಹ್ನವಿ (20) ಮತ್ತು ವೈಷ್ಣವಿ (20) ಎಂದು ಗುರುತಿಸಲಾಗಿದೆ.
ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಜಾಹ್ನವಿ, ವೈಷ್ಣವಿ ಸೇರಿದಂತೆ ನಾಲ್ವರು ಯುವತಿಯರು ಹಾಗೂ ಇಬ್ಬರು ಯುವಕರು ಸೇರಿ ಆರು ಮಂದಿ ವಿದ್ಯಾರ್ಥಿಗಳು, ಕುಣಿಗಲ್ ತಾಲ್ಲೂಕಿನ ಉತ್ತರಿ ಬೆಟ್ಟದ ಬಳಿ ಪ್ರಾಜೆಕ್ಟ್ ವರ್ಕ್ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದರು.
ಇವರ ಕಾರು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಇಂದು ಬೆಳಗಿನ ಜಾವ 6.45ರ ಸುಮಾರಿಗೆ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರು ವಿದ್ಯಾರ್ಥಿಗಳ ಪೈಕಿ ಗಗನ್ ಮತ್ತು ಜಶ್ವಂತ್ ಅವರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳಾದ ಹರ್ಣಿನಿ ಮತ್ತು ಹರ್ಣಿಶಿ ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಗಗನ್ ಮತ್ತು ಜಶ್ವಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರು ವಿದ್ಯಾರ್ಥಿನಿಯರ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಒಂದು ಮೂಲದ ಪ್ರಕಾರ, ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ನಂತರವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಲಿದೆ.
