Homeರಾಜ್ಯನಿತ್ಯ ಜೀವನದಲ್ಲಿ ಕನ್ನಡ ಬಳಸಿ, ಅದೇ ನಿಮ್ಮನ್ನು ಬೆಳೆಸುತ್ತದೆ: ಡಾಲಿ ಧನಂಜಯ್‌

ನಿತ್ಯ ಜೀವನದಲ್ಲಿ ಕನ್ನಡ ಬಳಸಿ, ಅದೇ ನಿಮ್ಮನ್ನು ಬೆಳೆಸುತ್ತದೆ: ಡಾಲಿ ಧನಂಜಯ್‌

ಅರಸೀಕೆರೆ, ನ.17- ಕನ್ನಡ ಭಾಷೆಯನ್ನು ನಿತ್ಯ ಜೀವನದಲ್ಲಿ ಬಳಸಿ, ಅದೇ ನಿಮ್ಮನ್ನು ಬೆಳೆಸುತ್ತದೆ ಎಂದು ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ್‌ ಕನ್ನಡಿಗರಿಗೆ ಕರೆ ನೀಡಿದರು. ತಾಲ್ಲೂಕಿನ ಮಲ್ಲಿದೇವಿಹಳ್ಳಿ ಮಂಜುನಾಥ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಕವಿಗಳು, ಸಾಹಿತಿಗಳು, ವಚನಕಾರರು ಹಾಗೂ ದಾಸಶ್ರೇಷ್ಠರು ಜಗತ್ತಿಗೆ ಪರಿಚಯಿಸಿದ್ದಾರೆ. ಇಂತಹ ಸುಸಂಸ್ಕೃತ ಭಾಷೆಯನ್ನು ಉಳಿಸಿ ಬೆಳೆಸಲು ಹೋರಾಟ ಮಾಡುವುದರ ಜೊತೆಗೆ ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಕನ್ನಡ ಬಳಸುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ಹಾಗೂ ಚೆಸ್ಕಾಂ ಸಲಹಾ ಸಮಿತಿ ಸದಸ್ಯ ಮಂಜುನಾಥ್‌ ಮಾತನಾಡಿ, ಕನ್ನಡ ಕೇವಲ ಭಾಷೆಯಲ್ಲ, ಅದು ನಮ್ಮ ಜೀವನಾಡಿ. ವೈವಿಧ್ಯಮಯ ಭಾರತದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ವಿಶೇಷ ಸ್ಥಾನಮಾನವಿದೆ. ಕನ್ನಡ ಲಿಪಿಯ ಸೌಂದರ್ಯ ಹಾಗೂ ಭಾಷೆಯ ಗತ್ತು, ಗಾಂಭೀರ್ಯ ಅದರ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್‌ ಡಾ. ನಾರಾಯಣಪ್ಪ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾರನಹಳ್ಳಿ ಶಿವಮೂರ್ತಿ, ಭೂ ನ್ಯಾಯ ಮಂಡಳಿ ಸದಸ್ಯ ಗುತ್ತಿನಕೆರೆ ಶ್ರೀನಿವಾಸ, ಗೀಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಧರ್ಮೇಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‌ ಕುಮಾರ್‌, ಕಾಂಗ್ರೆಸ್‌ ಮುಖಂಡ ಅಡವಿ ಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ, ಕರವೇ ನಗರ ಅಧ್ಯಕ್ಷ ಕಿರಣ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

Latest News