ಬೆಂಗಳೂರು, ನ. 18- ಕಸ ಆಯುವ ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿರು ಸೈಯದ್ ಆಜಿ ಮೊಹಮದ್(45)ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿ ದ್ದಾರೆ.
ಇಂದು ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಸ್ಥಳೀಯರು ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರು ಸುಟ್ಟ ಗಾಯ ಗಳೊಂದಿಗೆ ಬಿದ್ದಿರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬರು ಸೈಯದ್ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ಲಭಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದ ಸೈಯದ್ ಅವರನ್ನು ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸೈಯದ್ ಅವರಿಗೆ ಪರಿಚಿತ ಕುಟುಂಬದವರು ಅಥವಾ ಸಂಬಂಧಿಕರು ಯಾರೂ ಇಲ್ಲ ಎನ್ನಲಾಗಿದೆ. ಅವರಿಗೆ ಸ್ವಂತ ಮನೆಯೂ ಇಲ್ಲ, ಮೊಬೈಲ್ ಫೋನ್ ಹಾಗೂ ಗುರುತಿನ ಚೀಟಿಯೂ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರ ಮಾಹಿತಿ ಪ್ರಕಾರ, ಅವರು ಹಲವು ವರ್ಷಗಳಿಂದ ಪಾದರಾಯನಪುರ ಪ್ರದೇಶದಲ್ಲಿ ವಾಸವಿದ್ದು, ಬಳಿಕ ರಸ್ತೆ ಬದಿಗಳಲ್ಲಿ ಅಲೆದಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸ ಲಾಗುತ್ತಿದೆ.
ವ್ಯಕ್ತಿಯ ಮೇಲೆ ದಾಳಿ ನಡೆಸಿದವರು ಯಾರು, ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಗಿರಿನಗರ ಠಾಣೆ ಪೊಲೀಸರು ಮುಂದಾಗಿದ್ದು, ತನಿಖೆ ಮುಂದುವರಿದಿದೆ. ಗಾಂಜಾ ನಶೆಯಲ್ಲಿ ದೃಷ್ಕರ್ಮಿ ಗಳು ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಡಿಸಿಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
