ಬೆಂಗಳೂರು, ನ. 18- ಜಿಬಿಎ ಚುನಾವಣೆ ವಿಚಾರದಲ್ಲಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಕದ ತಟ್ಟಿರುವ ಸಂದರ್ಭದಲ್ಲೇ ಸರ್ಕಾರ ಕೂಡ ಚುನಾವಣೆಗೆ ಮತ್ತಷ್ಟು ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ನಿಗದಿಪಡಿಸಿರುವ ಕಾಲಮಿತಿಯನ್ನು ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನ ಮೊರೆ ಹೋಗಿದೆ.
2026ರ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸುವ ಬದಲಿಗೆ 2027ರ ಜನವರಿ 31ರೊಳಗೆ ಚುನಾವಣೆ ಪೂರ್ಣಗೊಳಿಸಲು ಅನುಮತಿ ನೀಡುವಂತೆ ಸರ್ಕಾರ ಮನವಿ ಮಾಡಿದೆ. ರಾಜ್ಯ ಚುನಾವಣಾ ಆಯೋಗವು ಸಲ್ಲಿಸಿರುವ ಕಾಲಾವಕಾಶ ವಿಸ್ತರಣೆಯ ಅರ್ಜಿಯನ್ನು ಬೆಂಬಲಿಸಿ ರಾಜ್ಯ ಸರ್ಕಾರವೂ ಸುಪ್ರೀಂ ಕೋರ್ಟ್ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಜೊತೆಗೆ, ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಗೆ ಹೆಚ್ಚಿನ ಸಮಯ ಬೇಕಾಗುವುದರಿಂದ ಹಳೆಯ ಮತದಾರರ ಪಟ್ಟಿಯನ್ನೇ ಆಧರಿಸಿ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಕೋರಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಸವಾಲು:ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಿಂದ ಬೆಂಗಳೂರಿನಲ್ಲಿ 43 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳು ಕಡಿತಗೊಂಡಿರುವುದನ್ನು ಸರ್ಕಾರ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ವಾರ್ಡ್ವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಾಗಿ ಹೊಸದಾಗಿ ವಾರ್ಡ್ವಾರು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಅಗತ್ಯವಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನಿಗದಿತ ಅವಧಿಯೊಳಗೆ ಚುನಾವಣೆ ನಡೆಸುವುದು ಕಷ್ಟಸಾಧ್ಯವಾಗಿರುವುದರಿಂದ ಕಾಲಾವಕಾಶ ವಿಸ್ತರಿಸುವ ಅಗತ್ಯವಿದೆ ಎಂಬುದು ಸರ್ಕಾರದ ವಾದವಾಗಿದೆ.
ಹಳೆಯ ಪಟ್ಟಿಯಲ್ಲಿ 88.95 ಲಕ್ಷ ಮತದಾರರು: ಹಳೆಯ ಮತದಾರರ ಪಟ್ಟಿಯಲ್ಲಿ ಒಟ್ಟು 88.95 ಲಕ್ಷ ಮತದಾರರ ಹೆಸರುಗಳಿದ್ದು, ಇದೇ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಹೊಸ ಮತದಾರರ ಪಟ್ಟಿ ಸಿದ್ಧಪಡಿಸುವುದರಿಂದ ಎದುರಾಗಬಹುದಾದ ವಿಳಂಬವನ್ನು ತಪ್ಪಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಹಳೆಯ ಪಟ್ಟಿಯ ಬಳಕೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯವನ್ನು ಸರ್ಕಾರ ಮುಂದಿಟ್ಟಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಅರ್ಜಿಯಲ್ಲಿ ಭರವಸೆ ನೀಡಿದೆ. ಈಗಾಗಲೇ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಕಾಲಮಿತಿಯ ಹಿನ್ನೆಲೆಯಲ್ಲಿ, ರಾಜ್ಯ ಚುನಾವಣಾ ಆಯೋಗದ ಅರ್ಜಿಗೆ ಬೆಂಬಲ ಸೂಚಿಸಿ ಸರ್ಕಾರವೂ ನ್ಯಾಯಾಲಯದ ಮೊರೆ ಹೋಗಿರುವುದು ಮಹತ್ವ ಪಡೆದುಕೊಂಡಿದೆ.
ಚುನಾವಣೆ ಮುಂದೂಡಿಕೆ, ಹೊಸ ಮತದಾರರ ಪಟ್ಟಿ ಸಿದ್ಧಪಡಿಸುವ ಅವಧಿ ಹಾಗೂ ಹಳೆಯ ಪಟ್ಟಿಯ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.ನ್ಯಾಯಾಲಯದ ತೀರ್ಪಿನ ಬಳಿಕ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣಾ ವೇಳಾಪಟ್ಟಿ ಮತ್ತು ಮತದಾರರ ಪಟ್ಟಿ ಸಿದ್ಧಪಡಿಸುವ ಪ್ರಕ್ರಿಯೆಯ ಮುಂದಿನ ನಡೆ ಸ್ಪಷ್ಟವಾಗಲಿದೆ.
