ಬೆಂಗಳೂರು,ನ.18- ಮಾಸಿಕ 15 ಸಾವಿರ ನಿಗದಿತ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಫ್ರೀಡಂ ಪಾರ್ಕಿನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು, ಬೇಡಿಕೆಗಳು ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಗಮಿಸಿರುವ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ತಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾತ್ರಿ ಚಳಿಯನ್ನೂ ಲೆಕ್ಕಿಸದೆ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ಮುಂದುವರಿಸಿರುವ ಕಾರ್ಯಕರ್ತೆಯರು, ತಮ ಸಮಸ್ಯೆಗಳನ್ನು ಆಲಿಸಲು ಸರ್ಕಾರದ ಯಾವುದೇ ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ನಿಗದಿತ ಗೌರವಧನ ನೀಡಬೇಕು ಎಂಬುದು ಹೋರಾಟದ ಪ್ರಮುಖ ಬೇಡಿಕೆಯಾಗಿದೆ. ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಕಾರ್ಯಕರ್ತೆಯರಿಗೆ ಸಮರ್ಪಕ ಗೌರವಧನ ನೀಡಬೇಕು. ಪ್ರೋತ್ಸಾಹಧನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ನಿಗದಿತ ಮಾಸಿಕ ಗೌರವಧನ ಖಾತರಿಪಡಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಇದಲ್ಲದೆ, ಸೇವೆಯಿಂದ ನಿವೃತ್ತರಾಗುವ ಆಶಾ ಕಾರ್ಯಕರ್ತೆಯರಿಗೆ 5 ಲಕ್ಷ ನಿವೃತ್ತಿ ಧನ ನೀಡಬೇಕು. ಆಶಾ ನಿಧಿಯಲ್ಲಿ ಬಾಕಿ ಉಳಿದಿರುವ ಎಲ್ಲ ಪ್ರೋತ್ಸಾಹಧನ ಹಾಗೂ ಗೌರವಧನದ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು. ತೀವ್ರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸೂಕ್ತ ಪ್ರೋತ್ಸಾಹಧನ ಅಥವಾ ಆರ್ಥಿಕ ನೆರವು ನೀಡಬೇಕು ಎಂಬ ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ.
ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ ಸಲ್ಲ: ಹೆಚ್ಡಿಕೆ ಟೀಕೆ
ಆಶಾ ತಾಯಂದಿರು ಮಕ್ಕಳೊಂದಿಗೆ ಮೈಕೊರೆವ ಚಳಿಯಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟಿಸುತ್ತಿರುವುದನ್ನು ನೋಡಿಕೊಂಡು ಸುಮನಿರುವುದು ನಾಗರಿಕ ಸರ್ಕಾರಕ್ಕೆ ಶೋಭೆ ಅಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಸಂಬಂಧ ತಮ ಎಕ್್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ತಿಂಗಳಿಗೆ 15,000 ರೂ. ಗೌರವಧನ ನಿಗದಿ ಸೇರಿದಂತೆ ತಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಳಿಯನ್ನೂ ಲೆಕ್ಕಿಸದೆ ಹಸುಗೂಸುಗಳೊಂದಿಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಶಾ ತಾಯಂದಿರು ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಸಂಬಂಧಿತ ಸಚಿವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಹಾಗೂ ಧರಣಿ ಅಂತ್ಯಗೊಳಿಸುವ ನಿಟ್ಟಿನಲ್ಲಿ
ತುರ್ತುಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಶ್ರಮಿಕರ ಕಷ್ಟಕಾರ್ಪಣ್ಯದ ಬಗ್ಗೆ ಅಸಡ್ಡೆ. ಆಶಾ ಕಾರ್ಯಕರ್ತೆಯರ ಧರಣಿ ಸತ್ಯಾಗ್ರಹ ಕಣ್ಣಿಗೆ ಕಾಣದಷ್ಟು ಅಸೂಕ್ಷ್ಮವಾಗಿದೆ ರಾಜ್ಯದ ಆಡಳಿತ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಜನರ ಆರೋಗ್ಯ ರಕ್ಷಣೆಯಲ್ಲಿ ಇವರ ಪಾತ್ರ ದೊಡ್ಡದು. ಇವರನ್ನು ಕಡೆಗಣಿಸುವುದು ಸರಿಯಲ್ಲ ಎಂದಿದ್ದಾರೆ.
