ಚಿಕ್ಕಮಗಳೂರು,ನ.19- ಭದ್ರಾಅಭಯಾರಣ್ಯಕ್ಕೆ 56 ಕಾಡಾನೆಗಳನ್ನು ಸ್ಥಳಾಂತರಿಸುವ ಆದೇಶ ಕೈಬಿಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಆಗ್ರಹಿಸಿದೆ. ಭದ್ರಾ ಅಭಯಾರಣ್ಯದಲ್ಲಿ ಈಗಾಗಲೇ ಕಾಡುಪ್ರಾಣಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಸ್ಥಳಾಂತರ ಪ್ರಕ್ರಿಯೆ ಜನವಿರೋಧಿಯಾಗಿದೆ ಎಂದು ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಅರಣ್ಯ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಅನಿಲ್ ಹೊಸಕೊಪ್ಪ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿ, ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಿಂದ ಶೃಂಗೇರಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಜನರಲ್ಲಿ ಆತಂಕ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸುಮಾರು 1000 ಚದರ ಕಿಲೋಮೀಟರ್ ವ್ಯಾಪ್ತಿಯ ಭದ್ರಾಅಭಯಾರಣ್ಯದಲ್ಲಿ ಸಾವಿರಾರು ಕಾಡುಕೋಣಗಳು, ನೂರಾರು ಕಾಡಾನೆಗಳು ಹಾಗೂ ಸಾವಿರಾರು ಜಿಂಕೆ, ಕಡವೆ, ಕಾಡುಹಂದಿ ಸೇರಿದಂತೆ ವಿವಿಧ ಕಾಡುಪ್ರಾಣಿಗಳಿವೆ. ಈ ಪ್ರಾಣಿಗಳ ಉಪಟಳದಿಂದ ಪ್ರತಿವರ್ಷ ಕಾಫಿ, ಅಡಿಕೆ, ತೆಂಗು, ಕಾಳುಮೆಣಸು, ಏಲಕ್ಕಿ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸಾವಿರಾರು ಎಕರೆ ಕೃಷಿ ಭೂಮಿ ನಾಶವಾಗುತ್ತಿದೆ.
ಕಾಡಾನೆ ಹಾಗೂ ಕಾಡುಕೋಣಗಳ ದಾಳಿಯಿಂದ ಈಗಾಗಲೇ 12 ಮಂದಿ ಮೃತಪಟ್ಟಿದ್ದು, ಮಲೆನಾಡಿನ ಜನರು ನಿರಂತರವಾಗಿ ಕಾಡುಪ್ರಾಣಿಗಳ ಹಾವಳಿಯಿಂದ ಭಯಭೀತರಾಗಿದ್ದಾರೆ. ಈ ಸಮಸ್ಯೆ ಕುರಿತು ಹಲವು ಪ್ರತಿಭಟನೆಗಳೂ ನಡೆದಿವೆ. ಇಂತಹ ಪರಿಸ್ಥಿತಿಯಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಕಾಡುಪ್ರಾಣಿಗಳಿರುವ ಭದ್ರಾ ಅಭಯಾರಣ್ಯಕ್ಕೆ ಮತ್ತಷ್ಟು ಕಾಡಾನೆಗಳನ್ನು ಸ್ಥಳಾಂತರಿಸುವ ನಿರ್ಧಾರವು ಸ್ಥಳೀಯ ಜನರ ಬದುಕು ಹಾಗೂ ಕೃಷಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
ಈ ಹಿನ್ನಲೆಯಲ್ಲಿ ಜನರ ಜೀವ, ಕೃಷಿ ಹಾಗೂ ಆಸ್ತಿ-ಪಾಸ್ತಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು 56 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಭದ್ರಾ ಅಭಯಾರಣ್ಯಕ್ಕಿಂತ ಮೂರು-ನಾಲ್ಕು ಪಟ್ಟು ಹೆಚ್ಚಿನ ವಿಸ್ತೀರ್ಣ ಹೊಂದಿರುವ, ಕಾಡುಪ್ರಾಣಿಗಳಿಗೆ ಸೂಕ್ತವಾದ ಇತರೆ ಅರಣ್ಯ ಪ್ರದೇಶಗಳನ್ನು ಗುರುತಿಸಿ ಸ್ಥಳಾಂತರ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಒಕ್ಕೂಟವು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಮಲೆನಾಡಿನ ಜನರ ಆತಂಕವನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಮೂಲಕ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
