Homeರಾಷ್ಟ್ರೀಯಕೊಲತ್ತೂರಿನಲ್ಲಿ ಎಂ.ಕೆ.ಸ್ಟಾಲಿನ್‌ಗೆ ಸೋಲುಣಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಕೊಲತ್ತೂರಿನಲ್ಲಿ ಎಂ.ಕೆ.ಸ್ಟಾಲಿನ್‌ಗೆ ಸೋಲುಣಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ

ಚೆನ್ನೈ, ನ.19- ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿದ್ದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕ ವಿ.ಎಸ್. ಬಾಬು (75) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.

ದೀರ್ಘಕಾಲದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಬು ಅವರನ್ನು ಸೆಪ್ಟೆಂಬರ್ 9ರಂದು ಚೆನ್ನೈನ ಅಮಿಂಜಿಕರೈನಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯಕೀಯ ವರದಿಯ ಪ್ರಕಾರ, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಟ್ಟಿದ್ದು, ಗುರುವಾರ ಮಧ್ಯಾಹ್ನ 2.24ಕ್ಕೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಬಾಬು ಅವರು ತಮ್ಮ ರಾಜಕೀಯ ಜೀವನವನ್ನು ಡಿಎಂಕೆ ಪಕ್ಷದ ಮೂಲಕ ಆರಂಭಿಸಿದ್ದರು. ಪಕ್ಷದ ವಲಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಅವರು, ಬಳಿಕ ಉತ್ತರ ಚೆನ್ನೈ ಜಿಲ್ಲಾ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು.

2006ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಅಭ್ಯರ್ಥಿಯಾಗಿ ಪುರಸವಾಕ್ಕಂ ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಕ್ಷೇತ್ರಗಳ ಪುನರ್ವಿಂಗಡಣೆ ಬಳಿಕ ಪುರಸವಾಕ್ಕಂ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಿತು. ಅದರ ಹಲವು ಪ್ರದೇಶಗಳು ಹೊಸದಾಗಿ ರಚನೆಯಾದ ಕೊಲತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆಯಾದವು.

2011ರ ವಿಧಾನಸಭೆ ಚುನಾವಣೆಯಲ್ಲಿ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಂ.ಕೆ. ಸ್ಟಾಲಿನ್ ಅವರ ಗೆಲುವಿಗೆ ಬಾಬು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. 2011ರ ಬಳಿಕ ಕೆಲಕಾಲ ರಾಜಕೀಯದಿಂದ ದೂರ ಉಳಿದಿದ್ದ ಅವರು, 2016ರಲ್ಲಿ ಎಐಎಡಿಎಂಕೆ ಸೇರಿದ್ದರು. ಈ ವರ್ಷದ ಆರಂಭದಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಬಾಬು ಅವರ ನಿಧನದಿಂದ ತಮಿಳುನಾಡು ವಿಧಾನಸಭೆಯಲ್ಲಿ ತೆರವಾದ ಸ್ಥಾನಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ನಾಯಕರಿಂದ ಸಂತಾಪ

ವಿ.ಎಸ್. ಬಾಬು ಅವರ ನಿಧನಕ್ಕೆ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಸಂತಾಪ ಸೂಚಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿರುವ ರಾಜ್ಯಪಾಲರು, ದುಃಖತಪ್ತ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಟಿವಿಕೆ ನಾಯಕ ಹಾಗೂ ನಟ ವಿಜಯ್ ಕೂಡ ಸಂತಾಪ ವ್ಯಕ್ತಪಡಿಸಿದ್ದು, ಬಾಬು ಅವರು ಸಾರ್ವಜನಿಕ ಜೀವನಕ್ಕೆ ಸಂಪೂರ್ಣವಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದರು. ಜನರ ಪ್ರೀತಿ, ಬೆಂಬಲ ಮತ್ತು ವಿಶ್ವಾಸ ಗಳಿಸಿದ್ದರು. ಅವರ ನಿಧನ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೂಡ ಬಾಬು ನಿಧನಕ್ಕೆ ಆಘಾತ ವ್ಯಕ್ತಪಡಿಸಿ, ಕುಟುಂಬದ ಸದಸ್ಯರಿಗೆ ಸಂತಾಪ ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರದ ಸಚಿವರು, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ, ಪಿಎಂಕೆ ಅಧ್ಯಕ್ಷ ಅನ್ಬುಮಣಿ ರಾಮದಾಸ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್, ವಿ ದಿ ಲೀಡರ್ಸ್ ಸಂಸ್ಥಾಪಕ ಕೆ. ಅಣ್ಣಾಮಲೈ ಹಾಗೂ ಮಾನವೀಯ ಮಕ್ಕಲ್ ಕಚ್ಚಿ ನಾಯಕ ಎಂ.ಎಚ್. ಜವಾಹಿರುಲ್ಲಾ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

RELATED ARTICLES

Latest News