Homeರಾಜ್ಯಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆದರೆ ಉಗ್ರ ಹೋರಾಟ : ಮುತಾಲಿಕ್‌ ಎಚ್ಚರಿಕೆ

ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಹಿಂಪಡೆದರೆ ಉಗ್ರ ಹೋರಾಟ : ಮುತಾಲಿಕ್‌ ಎಚ್ಚರಿಕೆ

ಹುಬ್ಬಳ್ಳಿ,ನ.20-ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯಲು ಮುಂದಾಗಿದ್ದು ಇದರ ವಿರುದ್ದ ರಾಜ್ಯಾದ್ಯಂತ ಗೋವುಗಳ ಸಮೇತ ಜಿಲ್ಲಾಧಿಕಾರಿ ಕಚೇರಿಗಳ ಎದುರು ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರ ಅಧಿಕಾರದ ಆಸೆಯಿಂದ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.ರಾಜ್ಯದ ಗಡಿ ಭಾಗಗಳಲ್ಲಿ ನೂರಾರು ಗೋಹತ್ಯೆಗಳು ನಡೆಯುತ್ತಿವೆ. ಪ್ರತಿನಿತ್ಯ ಸುಮಾರು 10 ಗೋವುಗಳನ್ನು ಹತ್ಯೆ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ಜಾರಿಗೆ ತರಲಾಗಿತ್ತು. ಆದರೂ ಗೋಹತ್ಯೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ರಾಜ್ಯ ಸರ್ಕಾರ ಕಾಯ್ದೆಯನ್ನು ಹಿಂಪಡೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಸರ್ಕಾರದ ತುಷ್ಟೀಕರಣ ನೀತಿ ಹಾಗೂ ಪೊಲೀಸ್‌‍ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರವೇ ಇಂತಹ ಘಟನೆಗಳಿಗೆ ಕಾರಣ ಎಂದು ಮುತಾಲಿಕ್‌ ಆರೋಪಿಸಿದರು.

800 ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ಆರೋಪ
ಗೋಹತ್ಯೆ ತಡೆಯಲು ಮುಂದಾದ ಸುಮಾರು 800 ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. 38 ಕಾರ್ಯಕರ್ತರ ಮೇಲೆ ಮುಸ್ಲಿಮರು ಹಾಗೂ ಗೋಹಂತಕರು ಹಲ್ಲೆ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಯಾವುದೇ ಅನುಮತಿ ಪಡೆಯದೆ ಸುಮಾರು 5 ಸಾವಿರ ಅಕ್ರಮ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ ಎಂದೂ ಅವರು ದೂರಿದರು.

ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವಂತೆ ಇತ್ತೀಚೆಗೆ ಮುಸ್ಲಿಂ ಮತ್ತು ಕ್ರೈಸ್ತ ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಒತ್ತಡ ಹೇರಿವೆ. ಈ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಕಾಯ್ದೆಯನ್ನು ಹಿಂಪಡೆಯಲು ಮುಂದಾಗಿದೆ ಎಂದು ಪ್ರಮೋದ್‌ ಮುತಾಲಿಕ್‌ ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ಮುಖಂಡರಾದ ಮಂಜುನಾಥ ಕಾಟಕರ, ಬಸ್ಸು ಗೌಡರ ಹಾಗೂ ಬಸ್ಸು ದುರ್ಗದ ಉಪಸ್ಥಿತರಿದ್ದರು.

RELATED ARTICLES

Latest News