ಡೆಹ್ರಾಡೂನ್ -: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ಶುಕ್ರವಾರ (ನವೆಂಬರ್ 20) ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಯಮಕೇಶ್ವರ ಬ್ಲಾಕ್ನ ಪಂಚೂರ್ ಗ್ರಾಮದ ತಮ್ಮ ನಿವಾಸದಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಸಾವಿತ್ರಿ ದೇವಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹಲವು ಬಾರಿ ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯ ವಿಚಾರಿಸಿದ್ದರು.
ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಪ್ರತಿಯೊಬ್ಬರ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟ ಎಂದು ಅವರು ದುಃಖ ಹಂಚಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಧಾಮಿ, ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಯೋಗಿ ಆದಿತ್ಯನಾಥ್ ಮತ್ತು ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಾನ್ ಕೇದಾರನಾಥ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಇನ್ನು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಪಂಕಜ್ ಚೌಧರಿ ಕೂಡ ಸಾವಿತ್ರಿ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತಾಯಿಯ ಅಗಲಿಕೆ ಜೀವನದಲ್ಲಿ ಎಂದಿಗೂ ತುಂಬಲಾಗದ ನಷ್ಟ ಎಂದು ಹೇಳಿರುವ ಅವರು, ಯೋಗಿ ಆದಿತ್ಯನಾಥ್ ಹಾಗೂ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡುವಂತೆ ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸಿದ್ದಾರೆ. ತಾಯಿಯ ನಿಧನದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ವೈಯಕ್ತಿಕ ನಷ್ಟ ಉಂಟಾಗಿದ್ದು, ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
