ಬೆಂಗಳೂರು,ನ.21- ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳಿಗೆ ತೇಜೋವಧೆ ಮಾಡಿ ಗೌರವಕ್ಕೆ ಧಕ್ಕೆ ಬರುವಂತೆ ಬ್ಲಾಕ್ಮೇಲ್ ಮಾಡುತ್ತಿರುವ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ಥ ಹಾಗೂ ನೌಕರರ ವಿರುದ್ಧ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಒಳಾಡಳಿತ ಇಲಾಖೆಯು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ಬಾಬು ನೇತೃತ್ವದ ಜೆಡಿಎಸ್ ಶಾಸಕರ ನಿಯೋಗ ನ.3 ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ಮನವಿಪತ್ರ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು.
ಈ ದೂರಿನ ಹಿನ್ನೆಲೆಯಲ್ಲಿ ಒಳಾಡಳಿತ ಇಲಾಖೆಯು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದು, ಪತ್ರದಲ್ಲಿ ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಆಡಳಿತ ಪಕ್ಷದ ಸಚಿವರು, ಶಾಸಕರು, ವಿರೋಧಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಮಾಡಲು ಪ್ರಚೋದಿಸಿ ಜನಪ್ರತಿನಿಧಿಗಳಿಗೆ ತೇಜೋವಧೆ ಮಾಡಿ ಗೌರವಕ್ಕೆ ಧಕ್ಕೆ ಬರುವಂತೆ ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ಕ್ರಮದ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಒಳಾಡಳಿತ ಇಲಾಖೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಸ್ಟಿಂಗ್ ಆಪರೇಷನ್ ಮಾಡಿರುವ ಆರೋಪಿಯನ್ನು ಬಂಧಿಸಿ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಪದೇಪದೇ ಆರೋಪ ಮಾಡುತ್ತಾ ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಸಂಬಂಧಿಸಿದ್ದು ಎನ್ನಲಾದ ಸ್ಟಿಂಗ್ ಆಪರೇಷನ್ ವಿಚಾರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವಿನ ಪರಸ್ಪರ ಆರೋಪ-ಪ್ರತ್ಯಾರೋಪಕ್ಕೂ ಎಡೆಮಾಡಿಕೊಟ್ಟಿತ್ತು. ಅಲ್ಲದೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೂ ಆಸ್ಪದ ಕಲ್ಪಿಸಿತ್ತು.
