Homeರಾಜ್ಯನ.26ಕ್ಕೆ BJP-JDS ಪಕ್ಷಗಳ ಜಂಟಿ ಶಾಸಕಾಂಗ ಪಕ್ಷ ಸಭೆ

ನ.26ಕ್ಕೆ BJP-JDS ಪಕ್ಷಗಳ ಜಂಟಿ ಶಾಸಕಾಂಗ ಪಕ್ಷ ಸಭೆ

ಬೆಂಗಳೂರು,ನ.24- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ 2 ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಜೆೆಡಿಎಸ್‌‍-ಬಿಜೆಪಿ ಜಂಟಿ ಶಾಸಕಾಂಗ ಪಕ್ಷದ ಸಭೆ ನ.26 ರಂದು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ.

ಅಧಿವೇಶನದ ಒಳ-ಹೊರಗೆ ಉಭಯಪಕ್ಷಗಳು ಜಂಟಿಯಾಗಿ ನಡೆಸಬೇಕಾಗಿರುವ ಹೋರಾಟದ ರೂಪುರೇಷೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ. ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು ಸೇರಿದಂತೆ ಉಭಯಪಕ್ಷಗಳ ವಿಧಾನಸಭೆಯ ಹಾಗೂ ವಿಧಾನಪರಿಷತ್‌ನ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಸಹ ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಹಿರಿಯೂರು ವಿಧಾನಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಉಭಯಸದನಗಳಲ್ಲಿ ಆದ್ಯತೆ ಮೇಲೆ ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು, ಜಂಟಿಯಾಗಿ ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಅವರಿಗೆ ಸೂಕ್ತ ಬರಪರಿಹಾರ ನೀಡುತ್ತಿಲ್ಲ ಎಂಬ ಆರೋಪವನ್ನು ನಿರಂತರವಾಗಿ ಉಭಯಪಕ್ಷಗಳು ಮಾಡುತ್ತಾ ಬಂದಿದ್ದು, ಈ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಬೇಡಿಕೆ, ಆಶಾ ಕಾರ್ಯಕರ್ತೆಯರ ಬೇಡಿಕೆ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದ ಒಳ-ಹೊರಗೆ ಜನಪರವಾಗಿ ಹೋರಾಟ ಮಾಡಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಪಶ್ಚಿಮಘಟ್ಟದಲ್ಲಿ ಆನೆ ಸೇರಿದಂತೆ ಮಾನವ ಹಾಗೂ ಪ್ರಾಣಿ ಸಂಘರ್ಷ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್‌ ಅಭಾವ, ಎಸ್‌‍ಐಆರ್‌ ಹಾಗೂ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರದ ಚುನಾವಣೆ ಅಲ್ಲದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಮುಂಬರುವ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ ಮೈತ್ರಿ ವಿಚಾರದ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.

ನ.27ಕ್ಕೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ
ನ.27 ರಂದು ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದ್ದು, ಮೈತ್ರಿ ಹೋರಾಟ ಯಾವ ರೀತಿ ಮುಂದುವರೆಸಬೇಕು, ತಮ ಪಕ್ಷದ ಬಲವರ್ಧನೆಗಾಗಿ ಸದನದ ಒಳ-ಹೊರಗೆ ಮಾಡಬೇಕಾಗಿರುವ ಜನಪರ ಹೋರಾಟಗಳ ಬಗ್ಗೆಯೂ ಸಮಾಲೋಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ.

RELATED ARTICLES

Latest News