ಬೆಂಗಳೂರು,ನ.25- ಡಿ.2ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಎರಡನೇ ದಿನವಾದ ಡಿ.3ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.
ರಾಜ್ಯ ಸರ್ಕಾರದ ವೈಫಲ್ಯಗಳು, ರೈತರಿಗೆ ಸಮರ್ಪಕ ಬರ ಪರಿಹಾರ ಒದಗಿಸುವಲ್ಲಿ ವಿಳಂಬ, ನೀರಾವರಿ ಯೋಜನೆಗಳ ಅನುಷ್ಠಾನ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ.ಬೆಳಗಾವಿಯ ಮಾಲಿನಿ ಸಿಟಿಯಲ್ಲಿರುವ ಮಾರ್ಕೆಟ್ ಮೈದಾನದಲ್ಲಿ ಡಿಸೆಂಬರ್ 3ರಂದು ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಲು ಉದ್ದೇಶಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮರ್ಪಕ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿಯೂ ನಿರೀಕ್ಷಿತ ಪ್ರಗತಿಯಾಗಿಲ್ಲ ಎಂಬ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧತೆ ನಡೆಸಿದ್ದಾರೆ.
ಮಾರ್ಕೆಟ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ ಬಳಿಕ ಅಲ್ಲಿಂದ ಸುವರ್ಣಸೌಧದತ್ತ ಮೆರವಣಿಗೆ ನಡೆಸಿ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಈ ಮೂಲಕ ಚಳಿಗಾಲದ ಅಧಿವೇಶನದ ಮೊದಲ ವಾರದಲ್ಲೇ ರಾಜ್ಯ ಸರ್ಕಾರದ ವಿರುದ್ಧ ರಾಜಕೀಯ ಒತ್ತಡ ಹೆಚ್ಚಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ.
ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ. ಗೋಕಾಕ್ ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಹಾಗೂ ಪ್ರಮುಖ ನಾಯಕರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ರೈತರು ಹಾಗೂ ಪಕ್ಷದ ಬೆಂಬಲಿಗರನ್ನು ಪ್ರತಿಭಟನಾ ಸಮಾವೇಶಕ್ಕೆ ಕರೆತರುವ ಕುರಿತು ಚರ್ಚೆ ನಡೆಸಲಾಗಿದೆ. ಸಮಾವೇಶದ ಸಿದ್ಧತೆ, ಕಾರ್ಯಕರ್ತರ ಸಂಘಟನೆ ಹಾಗೂ ಪ್ರತಿಭಟನೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿಯನ್ನು ಸ್ಥಳೀಯ ನಾಯಕರಿಗೆ ವಹಿಸಲು ನಿರ್ಧರಿಸಲಾಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ. ಡಿ.3ರಂದು ಬಿಜೆಪಿ ಹಮಿಕೊಂಡಿರುವ ಬೃಹತ್ ಪ್ರತಿಭಟನೆ ಹಾಗೂ ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ ಅಧಿವೇಶನದ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ಕಾವು ನೀಡುವ ನಿರೀಕ್ಷೆಯಿದೆ.
