Homeರಾಜ್ಯವಿನಯ್‌ ಕುಲಕರ್ಣಿಗೆ ಬಿಗ್ ಶಾಕ್ : ಜಾಮೀನು ರದ್ದುಗೊಳಿಸಿದ ಸುಪ್ರೀಂ, 2 ವಾರದಲ್ಲಿ ಶರಣಾಗಲು ಸೂಚನೆ

ವಿನಯ್‌ ಕುಲಕರ್ಣಿಗೆ ಬಿಗ್ ಶಾಕ್ : ಜಾಮೀನು ರದ್ದುಗೊಳಿಸಿದ ಸುಪ್ರೀಂ, 2 ವಾರದಲ್ಲಿ ಶರಣಾಗಲು ಸೂಚನೆ

ನವದೆಹಲಿ,ನ.25- ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌‍ ಶಾಸಕ ವಿನಯ್‌ ಕುಲಕರ್ಣಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ. ಹೈಕೋರ್ಟ್‌ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಮತ್ತು ಮೃತ ಯೋಗೇಶ್‌ ಗೌಡ ಅವರ ಸಹೋದರ ಗುರುನಾಥ್‌ ಗೌಡ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಸಿಬಿಐ ಹಾಗೂ ಗುರುನಾಥ್‌ ಗೌಡ ಅವರ ವಾದವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ವಿನಯ್‌ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದು ಮಾಡಿ ಮಹತ್ವದ ತೀರ್ಪು ನೀಡಿದೆ.

ಅರ್ಜಿಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಆದೇಶ ನೀಡಿದ್ದು, ಎರಡು ವಾರದಲ್ಲಿ ಶರಣಾಗಲು ವಿನಯ್‌ ಅವಕಾಶ ಕಲ್ಪಿಸಿಕೊಟ್ಟಿದೆ.ಯೋಗೇಶ್‌ ಗೌಡ ಕೊಲೆ ಪ್ರಕರಣದ ಹಿನ್ನೆಲೆ; 2016ರ ಜೂನ್‌ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್‌ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‌ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ತನಿಖೆ ನಡೆಸಿದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಹಾಗೂ ಸಂಚಿನ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. 2026ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್‌ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ವಿನಯ್‌ ಕುಲಕರ್ಣಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮೇಲನವಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠವು, ಇದೇ ವರ್ಷದ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್‌ ಗೌಡ ಅವರ ಸಹೋದರ ಸುಪ್ರೀಂಕೋರ್ಟ್‌ಗೆ ಮೇಲನವಿ ಸಲ್ಲಿಸಿದ್ದರು. ಅಕ್ಟೋಬರ್‌ 27ರಂದು ಎರಡೂ ಕಡೆಯ ವಾದ ಆಲಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯವು ಅಂತಿಮ ಆದೇಶ ಹೊರಡಿಸಿದೆ.

ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ : ಬಸವರಾಜ ಕೊರವರ

ಹುಬ್ಬಳ್ಳಿ,ನ.25- ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ ಸಂತಸ ವ್ಯಕ್ತಪಡಿಸಿದ್ದು, ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ಸುಪ್ರೀಂ ಕೋರ್ಟ್‌ ಉತ್ತಮ ಆದೇಶ ನೀಡಿದೆ. ಈ ಆದೇಶದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ. ರಾಜಕೀಯ ಪ್ರಭಾವ ಬಳಸಿ ಕೊಲೆ ಮಾಡಿಸಿ, ಬಳಿಕ ಅದರಿಂದ ಪಾರಾಗಬಹುದು ಎಂದು ಭಾವಿಸುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಸಂದೇಶವಾಗಿದೆ ಎಂದರು.

ವಿನಯ್‌ ಕುಲಕರ್ಣಿ ಸೇರಿದಂತೆ ಅವರ ಸಹಚರರಾದ 17 ಮಂದಿಯ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಎಲ್ಲರೂ ಎರಡು ವಾರಗಳೊಳಗೆ ಶರಣಾಗುವಂತೆ ಆದೇಶಿಸಿದೆ. ಇದರಿಂದ ನನಗೆ ಹಾಗೂ ಈ ಹೋರಾಟದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಬಹಳ ಸಂತೋಷವಾಗಿದೆ ಎಂದು ತಿಳಿಸಿದರು.

ಧಾರವಾಡದಲ್ಲಿ ಈ ಹಿಂದೆ ಅನೇಕ ದೊಡ್ಡ ಹೋರಾಟಗಾರರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ರಾಜಕೀಯ ಲಾಭಕ್ಕಾಗಿ ಕೊಲೆ ಮಾಡಿಸಿ, ನಂತರ ಅದರಿಂದ ಸುಲಭವಾಗಿ ಹೊರಬರಬಹುದು ಎಂಬ ಮನಸ್ಥಿತಿ ಸರಿಯಲ್ಲ. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದವು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್‌ ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಇದರಿಂದ ಅವರ ಶಾಸಕ ಸ್ಥಾನವೂ ಮುಂದುವರಿದಿತ್ತು ಎಂದು ಹೇಳಿದರು.

ಆದರೆ ಇದೀಗ ಸುಪ್ರೀಂ ಕೋರ್ಟ್‌ ಜಾಮೀನು ರದ್ದುಗೊಳಿಸಿರುವುದರಿಂದ ಶಾಸಕ ಸ್ಥಾನಕ್ಕೂ ಪರಿಣಾಮ ಉಂಟಾಗಿದೆ. ನಾವು ಈ ಹೋರಾಟದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದೇವೆ. ನಮ ಪಾಲಿಗೆ ಇದು ಮಹತ್ವದ ಬೆಳವಣಿಗೆಯಾಗಿದೆ ಎಂದು ಸಂತಸ ಹಂಚಿಕೊಂಡರು. ಇದು ನಮ ಹೋರಾಟದ ಅಂತಿಮ ಗೆಲುವಲ್ಲ. ಮುಂದಿನ ದಿನಗಳಲ್ಲಿ ಹೈಕೋರ್ಟ್‌ನಲ್ಲಿಯೂ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ. ನ್ಯಾಯಕ್ಕಾಗಿ ನಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಬಸವರಾಜ ಕೊರವರ ಹೇಳಿದರು.

RELATED ARTICLES

Latest News