Homeರಾಜ್ಯಬಿಜಿಎಸ್ ಸಂಸ್ಥೆಯಲ್ಲಿ ಶಿಕ್ಷಣ ಕ್ರಾಂತಿ : ಸಿಎಂ ಡಿಕೆಶಿ ಬಣ್ಣನೆ

ಬಿಜಿಎಸ್ ಸಂಸ್ಥೆಯಲ್ಲಿ ಶಿಕ್ಷಣ ಕ್ರಾಂತಿ : ಸಿಎಂ ಡಿಕೆಶಿ ಬಣ್ಣನೆ

ಬೆಂಗಳೂರು,ನ.27- ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ-ಧರ್ಮ ತರಬಾರದು ಮತ್ತು ಮಾನವ ಧರ್ಮ ಉಳಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕೆಂಗೇರಿಯ ಬಿಜಿಎಸ್ ಹೆಲ್ತ್‌ ಸಿಟಿಯಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶ್ರೀ ಬಾಲಗಂಗಾಧರನಾಥ ಶ್ರೀಗಳ ಆಶಯದಂತೆ ಇಂದು ಆದಿಚುಂಚನಗಿರಿಮಠ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಅವರ ಇಚ್ಚೆ ಸಾಕಾರಗೊಳ್ಳುತ್ತಿದೆ. ಅವರು ಭಗವಂತನ ಬಳಿ ಲೀನವಾಗಿದ್ದರೂ ಅವರ ಕಾರ್ಯಗಳು ಅಜರಾಮರ ಎಂದರು.

ಹಳ್ಳಿಗಾಡಿನ ಸಾವಿರಾರು ಬಹುತೇಕ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ಜ್ಞಾನಾರ್ಜನೆ ಪಡೆದಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳು ಮಾನವೀಯತೆ ಮತ್ತು ಶಿಕ್ಷಣ ವ್ಯವಸ್ಥೆಗೆ ಹೆಚ್ಚು ಮಹತ್ವದ ನೀಡಿದ ಮಹಾನ್ ಗುರು ಎಂದು ಬಣ್ಣಿಸಿದರು. ಸಂಸ್ಕಾರ-ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಕ್ರಾಂತಿಕಾರಿ ಹೆಜ್ಜೆ ಇಟ್ಟು ವಿದ್ಯಾರ್ಥಿಗಳ ಜ್ಞಾನಾರ್ಜನೆಯಲ್ಲಿ ದೊಡ್ಡ ಸಾಧನೆ ಮಾಡಿದೆ ಎಂದು ಹೇಳಿದರು.

ಪ್ರತಿ ವರ್ಷ ಒಂದೂವರೆ ಸಾವಿರಕ್ಕೂ ಹೆಚ್ಚು ವೈದ್ಯರು, 10 ಸಾವಿರಕ್ಕೂ ಹೆಚ್ಚು ಇಂಜಿನಿಯರ್ ಸೇರಿದಂತೆ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರೈಸಿ ಹೊರಹೊಮ್ಮುತ್ತಿದ್ದಾರೆ. ಇದು ಸಾಮಾನ್ಯದ ವಿಷಯವಿಲ್ಲ. ಗುರುವಿನ ಆಶೀರ್ವಾದದಿಂದಲೇ ಈ ಎಲ್ಲಾ ಕಾರ್ಯಗಳು ನಡೆಯುತ್ತಿದೆ ಎಂದರು. ಒಳ್ಳೆಯ ಶಿಕ್ಷಣ ಪಡೆದು ಮಾದರಿಯಾಗಿ ಸಮಾಜಕ್ಕೆ ಸೇವೆ ಸಲ್ಲಿಸುವಂತೆ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರೆ ನೀಡಿದರು.

ಇಂದಿನ ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠ ಕೈಗೊಂಡಿರುವ ಕಾರ್ಯಗಳನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಯುವ ಸಮುದಾಯಕ್ಕೆ ಗುಣಮಟ್ಟದ ಶಿಕ್ಷಣ, ಕೌಶಲ್ಯಕ್ಕೆ ರಾಜ್ಯ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ಶ್ರೀ.ಪ್ರಕಾಶ್‌ನಾಥ ಸ್ವಾಮೀಜಿ, ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಸಚಿವ ಎಚ್.ಸಿ.ಬಾಲಕೃಷ್ಣ, ಶಾಸಕ ಎಸ್.ಟಿ.ಸೋಮಶೇಖರ್, ನಟ ಗಣೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News