ನವದೆಹಲಿ,ನ.29-ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಮಸೂದೆಯನ್ನು ಸಂಸತ್ತಿನಲ್ಲಿ ಎದುರಿಸಲು ವಿರೋಧ ಪಕ್ಷಗಳ ಸಂಖ್ಯಾಬಲವನ್ನು ಕ್ರೋಡೀಕರಿಸುವ ಉದ್ದೇಶದಿಂದ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರು ಇದೀಗ ರಾಜಕೀಯ ಸಮಾಲೋಚನೆಗೆ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ತಮಿಳುನಾಡು ಮತ್ತು ಮಹಾರಾಷ್ಟ್ರದ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ಚೆನ್ನೈನಲ್ಲಿ ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು, ಮುಂಬೈನಲ್ಲಿ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಭೆಗಳು ಕೇವಲ ಸೌಜನ್ಯದ ಭೇಟಿಗಳಲ್ಲ. ಕ್ಷೇತ್ರ ಮರುವಿಂಗಡಣೆ ಮಸೂದೆಯ ವಿಚಾರದಲ್ಲಿ ವಿರೋಧ ಪಕ್ಷಗಳ ನಡುವೆ ಮೂಡಿರುವ ಭಿನ್ನಾಭಿಪ್ರಾಯಗಳನ್ನು ನಿವಾರಿಸಿ, ಸಂಸತ್ತಿನಲ್ಲಿ ಒಗ್ಗಟ್ಟಿನ ನಿಲುವು ರೂಪಿಸುವುದು ಈ ಭೇಟಿಗಳ ಹಿಂದಿನ ಪ್ರಮುಖ ಉದ್ದೇಶವಾಗಿದೆ.
ಸ್ಟಾಲಿನ್, ಪವಾರ್ ಭೇಟಿಗೆ ವಿಶೇಷ ಮಹತ್ವ
ಕ್ಷೇತ್ರ ಮರುವಿಂಗಡಣೆ ಮಸೂದೆಯ ವಿಚಾರದಲ್ಲಿ ಓಆಂ ಮೈತ್ರಿಕೂಟದೊಳಗೆ ಏಕರೂಪದ ನಿಲುವು ಇಲ್ಲದಿರುವುದು ಕಾಂಗ್ರೆಸ್ಗೆ ದೊಡ್ಡ ಸವಾಲಾಗಿದೆ.ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಈಗಾಗಲೇ ಕೇಂದ್ರ ಸರ್ಕಾರದ ಪ್ರಸ್ತಾವಿತ ಮಸೂದೆಗೆ ಬೆಂಬಲ ಸೂಚಿಸಿದೆ. ಇದೇ ವೇಳೆ ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಕೂಡ ಮಸೂದೆಯನ್ನು ಬೆಂಬಲಿಸುವ ಸಾಧ್ಯತೆಯಿದೆ ಎಂಬ ಚರ್ಚೆ ನಡೆಯುತ್ತಿದೆ.
ಇದು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್ತಿ, ಜನಸಂಖ್ಯೆ ಆಧಾರಿತ ಕ್ಷೇತ್ರಗಳ ಮರುವಿಂಗಡಣೆ ಹಾಗೂ ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಪ್ರಾದೇಶಿಕ ಪಕ್ಷಗಳು ವಿಭಿನ್ನ ಅಭಿಪ್ರಾಯ ಹೊಂದಿವೆ.
ಹೀಗಾಗಿ ಸ್ಟಾಲಿನ್ ಮತ್ತು ಪವಾರ್ ಅವರೊಂದಿಗೆ ಮಾತುಕತೆ ನಡೆಸಿ, ಮಸೂದೆಯ ಪರಿಣಾಮಗಳು ಹಾಗೂ ಸಂಸತ್ತಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಒಮತ ಮೂಡಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಕೂಡ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಡಿ.ಕೆ. ಶಿವಕುಮಾರ್ ಕೂಡ ಭಾಗಿ
ಈ ರಾಜಕೀಯ ಸಮಾಲೋಚನೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಮತ್ತು ಕ್ಷೇತ್ರ ಮರುವಿಂಗಡಣೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಈ ನಾಯಕರ ಅಭಿಪ್ರಾಯಗಳು ಮಹತ್ವ ಪಡೆದುಕೊಂಡಿವೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯೆ ನಿಯಂತ್ರಣ, ಅಭಿವೃದ್ಧಿ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಪರಿಗಣಿಸದೆ ಕೇವಲ ಜನಸಂಖ್ಯೆಯ ಆಧಾರದಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸುವುದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗಬಹುದು ಎಂಬ ಆತಂಕವನ್ನು ವಿರೋಧ ಪಕ್ಷಗಳು ವ್ಯಕ್ತಪಡಿಸುತ್ತಿವೆ.
ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
ಈ ಮಧ್ಯೆ, ಕೇಂದ್ರ ಸರ್ಕಾರದ ಪ್ರಸ್ತಾವಿತ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಬೆಂಬಲಿಸುವ ಅಥವಾ ವಿರೋಧಿಸುವ ಪಕ್ಷಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ನೇರ ಸಂದೇಶ ರವಾನಿಸಿದ್ದಾರೆ.
ಭಾರತೀಯ ಪ್ರಜಾಪ್ರಭುತ್ವದ ಹತ್ಯೆಯಾಗುತ್ತಿದೆ, ದಯವಿಟ್ಟು ಎಚ್ಚೆತ್ತುಕೊಳ್ಳಿೞ ಎಂದು ಅವರು ಎಚ್ಚರಿಸಿದ್ದಾರೆ.ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಯಾರು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಿದ್ದಾರೆ ಮತ್ತು ಯಾರು ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಮಸೂದೆಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ. ಆದರೆ, ಮಸೂದೆಯನ್ನು ಬೆಂಬಲಿಸುವುದರಿಂದ ಮಾತ್ರ ಓಆಂ ಮೈತ್ರಿಕೂಟದೊಂದಿಗಿನ ಸಂಬಂಧ ಮುರಿದುಬೀಳುವುದಿಲ್ಲ ಎಂಬ ಸಂದೇಶವನ್ನು ಶರದ್ ಪವಾರ್ ಅವರ ಪಕ್ಷದ ವಿಚಾರದಲ್ಲಿ ಕಾಂಗ್ರೆಸ್ ನೀಡಿದೆ. ಎನ್ಸಿಪಿ (ಎಸ್ಪಿ) ಮಸೂದೆಯನ್ನು ಬೆಂಬಲಿಸಿದರೂ ಮೈತ್ರಿಕೂಟದಲ್ಲಿನ ಅದರ ಸ್ಥಾನಮಾನದಲ್ಲಿ ಬದಲಾವಣೆ ಇರುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಮಹಿಳಾ ಮೀಸಲಾತಿ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡಣೆ?
ಕೇಂದ್ರ ಸರ್ಕಾರದ ಪ್ರಸ್ತಾವಿತ ಸಂವಿಧಾನ ತಿದ್ದುಪಡಿ ಮಸೂದೆಯ ಪ್ರಮುಖ ಉದ್ದೇಶ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದಾಗಿದೆ.ಆದರೆ, ಈ ಮೀಸಲಾತಿಯನ್ನು ಜಾರಿಗೊಳಿಸುವ ವಿಧಾನವೇ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಪ್ರಸ್ತಾವನೆಯ ಪ್ರಕಾರ, ಲೋಕಸಭೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹಂಚಿಕೆಯಾಗುವ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸದಸ್ಯ ಬಲವನ್ನೂ ಶೇ.50ರಷ್ಟು ಹೆಚ್ಚಿಸುವ ಪ್ರಸ್ತಾವನೆಯಿದೆ.
ಇದರೊಂದಿಗೆ ಪರಿಷ್ಕೃತ ಸ್ಥಾನಗಳು ಮತ್ತು ಕ್ಷೇತ್ರಗಳ ಗಡಿಗಳನ್ನು 2051ರವರೆಗೆ ಬದಲಾಯಿಸದಂತೆ ಸ್ಥಗಿತಗೊಳಿಸುವ ಪ್ರಸ್ತಾಪವೂ ಇದೆ.ವಿರೋಧ ಪಕ್ಷಗಳ ಪ್ರಕಾರ, ಮಹಿಳಾ ಮೀಸಲಾತಿ ಜಾರಿಗೊಳಿಸುವ ಹೆಸರಿನಲ್ಲಿ ಕ್ಷೇತ್ರ ಮರುವಿಂಗಡಣೆಯನ್ನು ತ್ವರಿತವಾಗಿ ಜಾರಿಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದರಿಂದ ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ.
ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರಾಜಕೀಯ ಹಿತಾಸಕ್ತಿಗಳ ಮೇಲೂ ಪರಿಣಾಮ ಬೀರಬಹುದು ಎಂಬ ಆತಂಕವನ್ನು ಮೈತ್ರಿಕೂಟ ವ್ಯಕ್ತಪಡಿಸಿದೆ.
ಕಾಂಗ್ರೆಸ್ಗೆ ಸಂಖ್ಯಾಬಲದ ಸವಾಲು
ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರಕ್ಕೆ ಸಂಸತ್ತಿನಲ್ಲಿ ವಿಶೇಷ ಬಹುಮತದ ಅಗತ್ಯವಿದೆ. ಹೀಗಾಗಿ ಆಡಳಿತಾರೂಢ ಎನ್ಡಿಎ ಮೈತ್ರಿಕೂಟಕ್ಕೆ ತನ್ನ ಮಿತ್ರಪಕ್ಷಗಳ ಬೆಂಬಲವನ್ನು ಖಚಿತಪಡಿಸಿಕೊಳ್ಳುವುದು ಎಷ್ಟು ಮುಖ್ಯವೋ, ವಿರೋಧ ಪಕ್ಷಗಳಿಗೂ ಮಸೂದೆಯನ್ನು ತಡೆಯಲು ಅಗತ್ಯವಾದ ಸಂಖ್ಯಾಬಲ ಕ್ರೋಡೀಕರಿಸುವುದು ಅಷ್ಟೇ ಮುಖ್ಯವಾಗಿದೆ.ಈ ಹಿನ್ನೆಲೆಯಲ್ಲಿ ಡಿಎಂಕೆ ಮತ್ತು ಎನ್ಸಿಪಿ (ಎಸ್ಪಿ) ಪಕ್ಷಗಳ ನಿಲುವು ನಿರ್ಣಾಯಕವಾಗಬಹುದು. ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳ ಬೆಂಬಲ ಅಥವಾ ವಿರೋಧವು ಸಂಸತ್ತಿನ ಮತದಾನದ ಲೆಕ್ಕಾಚಾರವನ್ನು ಬದಲಾಯಿಸುವ ಸಾಧ್ಯತೆಯಿದೆ.
ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ವಿಚಾರವು ಈಗ ಕೇವಲ ಸಂವಿಧಾನ ತಿದ್ದುಪಡಿಯ ಚರ್ಚೆಯಾಗಿ ಉಳಿದಿಲ್ಲ. ಇದು ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಶಕ್ತಿಪರೀಕ್ಷೆಯಾಗಿ ಮಾರ್ಪಟ್ಟಿದೆ. ಚೆನ್ನೈ ಮತ್ತು ಮುಂಬೈನಲ್ಲಿ ನಡೆಯಲಿರುವ ಖರ್ಗೆ, ಸೋನಿಯಾ, ರಾಹುಲ್ ಹಾಗೂ ಮಮತಾ ಅವರ ಮಾತುಕತೆಗಳು ಓಆಂ ಮೈತ್ರಿಕೂಟದ ಮುಂದಿನ ಕಾರ್ಯತಂತ್ರಕ್ಕೆ ದಿಕ್ಕು ನೀಡಲಿವೆ. ವಿಶೇಷ ಅಧಿವೇಶನದಲ್ಲಿ ಯಾರು ಯಾರ ಪರ ನಿಲ್ಲುತ್ತಾರೆ ಮತ್ತು ಸಂವಿಧಾನ ತಿದ್ದುಪಡಿ ಮಸೂದೆಗೆ ಯಾವ ರೀತಿಯ ಬೆಂಬಲ ಸಿಗುತ್ತದೆ ಎಂಬುದು ಈಗ ಕುತೂಹಲ ಮೂಡಿಸಿದೆ.
