ಬೆಂಗಳೂರು,ಏ.30- ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾ ಎಚ್.ಡಿ.ದೇವೇಗೌಡರ ಅನುಮೋದನೆಯಂತೆ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ಅವರು ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಅಮಾನತು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ತೀರ್ಮಾನದ ಬೆನ್ನಲ್ಲೇ ಪಕ್ಷದಿಂದ ಅಮಾನತು ಆದೇಶ ಹೊರಬಿದ್ದಿದೆ.
ಜೆಡಿಎಸ್ ಪಕ್ಷದ ಸಂವಿಧಾನ ಮತ್ತು ನಿಯಮಗಳಡಿ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಘನತೆ, ಗೌರವಗಳಿಗೆ ಮತ್ತು ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತುವಿಡಿಯೋಗಳ ಬಗ್ಗೆ ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಒಂದು ವಿಶೇಷ ತನಿಖಾ ದಳವನ್ನು ರಚಿಸಿದೆ. ಆ ತನಿಖಾ ದಳವು ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ಹೇಳಲಾಗಿದೆ.