ಬೆಂಗಳೂರು,ಮೇ8- ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚೇತರಿಕೆ ಕಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇನ್ನು ನಾಲ್ಕು ದಿನ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಲಘು ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸುತ್ತಮುತ್ತ ಚದುರಿದಂತೆ ಇನ್ನು ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ನಿನ್ನೆ ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ 4 ಸೆ.ಮೀ, ಪರಶುರಾಮಪುರ, ಹಾರಂಗಿಯಲ್ಲಿ 3 ಸೆ.ಮೀ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲೂ ಮಳೆಯಾಗಿದೆ. ಹವಾಮಾನ ಇಲಾಖೆಯ ಮೂನ್ಸೂಚನೆ ಪ್ರಕಾರ ಸಂಜೆ ಹಾಗೂ ರಾತ್ರಿ ವೇಳೆ ಮಿಂಚು ಗುಡುಗಿನ ವಾತಾವರಣ ಉಂಟಾಗಿ ಕೆಲವೆಡೆ ಮಳೆಯಾಗಬಹುದು. ಇನ್ನು ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಹಾಗೂ ಕೆಲವೆಡೆ ಗಾಳಿ, ಮಳೆಯೂ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.