ಬೆಂಗಳೂರು,ಮೇ 10- ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭರಣಿ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ.ಭರಣಿ ಮಳೆಯಾದರೆ ಧರಣಿಯೆಲ್ಲಾ ಸಂತುಷ್ಠಿ ಎಂಬ ನಾಣ್ನುಡಿಯಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೇ17ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ.
ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದ್ದರೆ, ಕೆಲವೆಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಉತ್ತಮ ಮಳೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಇನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಮೇ 12ರಿಂದ ಮೇ 17ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ಈ ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಚದುರಿದಂತೆ ಅಲ್ಲಲ್ಲಿ ಬೀಳುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕುಸಿತ ಗರಿಷ್ಠ ತಾಪಮಾನ :
ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವು ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಸರಾಸರಿಗಿಂತ ಸುಮಾರು ಮೂರು ಡಿ.ಸೆಂ.ನಷ್ಟು ಹೆಚ್ಚಾಗಿದ್ದ ಗರಿಷ್ಠ ತಾಪಮಾನದಲ್ಲಿ ತೀವ್ರವಾಗಿ ಕುಸಿತವಾಗಿದೆ. ಇದರಿಂದ ಬಿರು ಬೇಸಿಗೆಯಲ್ಲೂ ತಂಪಾದ ವಾತಾವರಣ ನಿರ್ಮಾಣವಾಗಿದೆ. ಬೇಸಿಗೆಯ ಬೇಗೆಯಿಂದ ಬಸವಳಿದಿದ್ದ ಜನರಿಗೆ ಖುಷಿ ತಂದಿದೆ. ಜೊತೆಗೆ ವಾತಾವರಣವೂ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರರಿಂದ ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ಇಳಿಕೆಯಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮಾತ್ರ 40 ಡಿ.ಸೆಂ.ಗಿಂತ ಹೆಚ್ಚು ತಾಪಮಾನವಿದೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 38 ಡಿ.ಸೆಂ.ಗಿಂತ ಕಡಿಮೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಗರಿಷ್ಠ ತಾಪಮಾನ 33.6ಡಿ.ಸೆಂ. ಗೆ ಇಳಿಕೆಯಾಗಿದೆ.