ಬೆಂಗಳೂರು,ಮೇ 13- ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡಾ.ಸತ್ಯನಾರಾಯಣ ಅವರ ನೇತೃತ್ವದ ಹಿರಿಯ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದ ಬಗ್ಗೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ವಹಿಸಿದ್ದು, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದಿನದಿಂದ ದಿನಕ್ಕೆ ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.
ಕಳೆದ ವಾರ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣ ಎಸ್.ಎಂ.ಕೃಷ್ಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.