ಬೆಂಗಳೂರು,ಮೇ18- ರಾಜ್ಯದಲ್ಲಿ ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ.
ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ಮುಖಂಡರಾದ ಎಸ್.ಹರೀಶ್, ಅಶ್ವತ್ಥನಾರಾಯಣ, ಮಾಳವಿಕ ಅವಿನಾಶ್ ಮತ್ತಿತರ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.
ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ, ಮಡಿಕೇರಿಯಲ್ಲಿ ವಿದ್ಯಾರ್ಥಿನಿಯ ಬರ್ಭರ ಕೊಲೆ, ಮೂರು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೆರೆ ಹತ್ಯೆ ಸೇರಿದಂತೆ ಕಳೆದ ಎರಡು ತಿಂಗಳಿನಿಂದ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಉಲ್ಲೇಖ ಮಾಡಲಾಗಿದೆ.
ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ. ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ, ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ.46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.
ಹಿಂದೆ ರಾಜ್ಯವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ.
ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ ಗಮನಕ್ಕೆ ತರಲು ಬಯಸುತ್ತೇವೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಾಂಗ್ರೆಸ್ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ. ಇದರಿಂದ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು, ಶ್ರೀಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ.
ಗನ್ ಹಿಡಿದು ಓಡಾಡುವ ವ್ಯಕ್ತಿ ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಃಸ್ಥಿತಿ ರಾಜ್ಯದ್ದು. ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ ಎಂದು ವಿಷಾದಿಸಿದೆ.
ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರಿಕರು ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್‌ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ ಎಂಬುದನ್ನೂ ತಮ ಅವಗಾಹನೆಗೆ ತರಲು ಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.