ಮೈಸೂರು, ಡಿ.28- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಕಟ್ಟಡವನ್ನು ಖಾಸಗಿ ಉದ್ದೇಶಕ್ಕೆ ಬಳಸುವುದು ಅಕ್ಷಮ್ಯ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಇದೊಂದು ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವಾಲಯಕ್ಕೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಯದುವೀರ್ ಒಡೆಯರ್ ಅವರು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಟ್ಟಿಗೆಗೂಡು ಪ್ರದೇಶದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಾಸ್‌ಪೋರ್ಟ್ ಕಚೇರಿ ಸ್ಥಾಪನೆಗಾಗಿ ನಿರ್ಮಿಸಲಾದ ಸರ್ಕಾರಿ ಕಟ್ಟಡವನ್ನು ಹಲವು ವರ್ಷಗಳಿಂದ ಅದರ ಉದ್ದೇಶಕ್ಕೆ ಬಳಸದೆ ಖಾಸಗಿ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ನೀಡಲಾಗಿದೆ ಎಂಬ ವಿಷಯ ನನ್ನ ಗಮನಕ್ಕೆ ಬಂದಿದೆ. ಇದು ಅತ್ಯಂತ ಗಂಭೀರ ಮತ್ತು ನಿಯಮಬಾಹಿರ ವಿಷಯವಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರದ ಹಣದಿಂದ ನಿರ್ಮಿಸಲಾದ ಕಟ್ಟಡವನ್ನು ಖಾಸಗಿ ಬಳಕೆಗೆ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಸಿದುಕೊಂಡಂತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ವಿಷಯವನ್ನು ತಕ್ಷಣ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಮತ್ತು ಪಾಸ್‌ಪೋರ್ಟ್ ಕಚೇರಿಯನ್ನು ಅದೇ ಕಟ್ಟಡದಲ್ಲಿ ಬೇಗ ಪ್ರಾರಂಭಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
