ಬೆಂಗಳೂರು, ಮೇ 24- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಹೂಡಿಕೆದಾರರು ದೇಶವನ್ನೇ ಬಿಟ್ಟು ಹೋಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿಗಳು ಕರ್ನಾಟಕದ ಬದಲಾಗಿ ನೆರೆರಾಜ್ಯಗಳಿಗೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಕಿಡಿಕಾರಿರುವ ಅವರು, ಬಿಜೆಪಿಗೆ ನಾಚಿಕೆಯಾಗಬೇಕು. ಮೊದಲು ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಸವಾಲು ಹಾಕಿದ್ದಾರೆ.
ಬಿಜೆಪಿಯ ಆಡಳಿತದ ಅವಧಿಯಲ್ಲಿ ಕಿರುಕುಳಕ್ಕಾಗಿ ಎಷ್ಟು ಉದ್ಯಮಿಗಳು ದೇಶ ಬಿಟ್ಟು ಹೋಗಿದ್ದರು ಎಂಬುದನ್ನು ನೋಡಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಹೂಡಿಕೆಯಾಗುತ್ತಿದೆ. ನಮ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇವರಿಬ್ಬರೂ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ರಾಜ್ಯದಲ್ಲಿ ಎಷ್ಟು ಮಂದಿ ಹೂಡಿಕೆ ಮಾಡಿದ್ದಾರೆ ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಅಭಿವೃದ್ಧಿಗೆ, ಶಾಂತಿಗೆ ಜಾಗತಿಕವಾಗಿ ಹೆಸರುವಾಸಿಯಾಗಿದೆ. ಅದರಲ್ಲೂ ಬೆಂಗಳೂರಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ ಎಂದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಬಹಿರಂಗ ಪತ್ರ ಬರೆದು ಭಾರತಕ್ಕೆ ಮರಳುವಂತೆ ಸೂಚಿಸಿರುವುದು ಕೌಟುಂಬಿಕ ವಿಚಾರ. ಇದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿರುವುದು ಶೋಕಿಗಾಗಿ ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅವರಿಗೆ ಏನು ಬೇಕೋ ಅದನ್ನು ಟೀಕೆ ಮಾಡಿಕೊಳ್ಳಲಿ. ನಾವು ಜನರೊಂದಿಗಿದ್ದೇವೆ, ಜನ ನಮೊಂದಿಗಿದ್ದಾರೆ ಎಂದು ಹೇಳಿದರು.