ಬೆಂಗಳೂರು, ಮೇ 25- ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ನಿವಾಸದಲ್ಲಿಂದು ಪ್ರಮುಖ ಸಚಿವರುಗಳ ಸಭೆ ನಡೆಸಿ ಸಮಾಲೋಚನೆ ಮಾಡಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್‌ರವರು ರಹಸ್ಯ ಸಭೆ ನಡೆಸಿದರು.
ಮೂಲಗಳ ಪ್ರಕಾರ, 7 ಸ್ಥಾನಗಳ ಪೈಕಿ ಎಸ್‌ಸಿ/ಎಸ್ಟಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಅದರಲ್ಲೂ ಎಸ್‌ಸಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅವಕಾಶ ನೀಡಬೇಕಿದೆ. ಈ ಬಾರಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು.
ಕಳೆದ ಜೂನ್‌ನಲ್ಲಿ ನಡೆದ ನಾಮನಿರ್ದೇಶನದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂಬ ಒತ್ತಾಯಗಳಿವೆ. ಹೀಗಾಗಿ ಡಿ.ಕೆ.ಶಿವಕುಮಾರ್‌ರವರು ಸಚಿವರ ಜೊತೆ ಸಮಾಲೋಚನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ವಿಚಾರ ವಿನಿಮಯ ಮಾಡಿದ್ದಾರೆ. ಶೀಘ್ರವೇ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.