ನವದೆಹಲಿ,ಡಿ.29- ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ಮಹೇಶ್ವರಿ ಹಾಗೂ ಅಗಸ್ಟಿನ್ ಜಾರ್ಜ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತರಿಗೆ ಕಾನೂನು ನೆರವು ನೀಡುವಂತೆಯೂ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ನೋಟೀಸ್ ಜಾರಿ ಮಾಡಿರುವ ನ್ಯಾಯಪೀಠ ವಿಚಾರಣೆಯನ್ನು ಒಂದು ತಿಂಗಳ ಕಾಲ ಮುಂದೂಡಿದೆ.
ಸಂತ್ರಸ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಕ್ಕಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ಡಿ.23 ರಂದು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿತು, ಅವರು ಈಗಾಗಲೇ ಏಳು ವರ್ಷ ಮತ್ತು ಐದು ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ತಿಳಿಸಿತ್ತು.
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಕುಲದೀಪ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವುದನ್ನು ವಿರೋಧಿಸಿ ಸಿಬಿಐ ಸಲ್ಲಿಸಿದ ಅರ್ಜಿಯ ವಿಚಾರಣೆಗೆ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಹೊರಗೆ ಪ್ರತಿಭಟನೆ ನಡೆಸಿದ್ದರು.
ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಅವರ ವಕೀಲ ಶಶಿ ತ್ರಿಪಾಠಿ ಅವರು, ನಾವು ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇಡಬೇಕು. ನಮಲ್ಲಿ ಉತ್ತಮ ಕಾನೂನು ವ್ಯವಸ್ಥೆ ಇದೆ ಎಂದು ಹೇಳಿದರು.
ಉಚ್ಚಾಟಿತ ಬಿಜೆಪಿ ಶಾಸಕರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.
