ಬೆಂಗಳೂರು, ಜೂ.1-ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸೋಮವಾರ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ 10.30ಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ಸಭೆ ಜರುಗಲಿದೆ.
ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ನ 11 ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನ. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಜೆಡಿಎಸ್ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದ ಪಕ್ಷದ ಮುಖಂಡ ಟಿ.ಎನ್.ಜವರಾಯಿಗೌಡ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ನಾಯಕರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ. ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಶಾಸಕರು ಸಹಿ ಹಾಕಬೇಕಾಗಿರುವುದರಿಂದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಈ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗದೇ ಮತದಾನ ನಡೆಯುವುದು ಖಾತರಿಯಾದರೆ, ಕೈಗೊಳ್ಳಬೇಕಾದ ಚುನಾವಣಾ ತಂತ್ರಗಾರಿಕೆ, ಮೇಲನೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಒಂದು ವೇಳೆ ಮತದಾನ ನಡೆಯುವುದು ಅನಿವಾರ್ಯವಾದರೆ, ಮಿತ್ರ ಪಕ್ಷ ಬಿಜೆಪಿ ಜತೆಗೂಡಿ ಚುನಾವಣೆ ಎದುರಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗುತ್ತದೆ. ಮೊದಲ ಪ್ರಾಶಸ್ತ್ಯದ ಮತವನ್ನು ಪಕ್ಷದ ಅಭ್ಯರ್ಥಿಗೆ ಚಲಾಯಿಸುವುದು ಎರಡನೇ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿಗಳಿಗೆ ನೀಡುವುದು, ಹಾಗೆಯೇ ಬಿಜೆಪಿಯ ಹೆಚ್ಚುವರಿ ಮತ ಹಾಗೂ ಎರಡನೇ ಪ್ರಾಶಸ್ತ್ಯದ ಮತವನ್ನು ಅವರಿಂದ ಪಡೆಯುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಅಲ್ಲದೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ, ಪಕ್ಷದ ವತಿಯಿಂದ ಕೈಗೊಳ್ಳುವ ಹೋರಾಟ ಮೊದಲಾದ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.