ಬೆಂಗಳೂರು, ಡಿ.30 – ಜಿಬಿಎ ವ್ಯಾಪ್ತಿಯ ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಇಂದಿಲ್ಲಿ ತಿಳಿಸಿದರು.
ಜಿಬಿಎ ಕೇಂದ್ರ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಕುರಿತಂತೆ ಮಾಹಿತಿ ನೀಡಿ, ಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಚುನಾವಣಾ ಆಯೋಗದ ವೇಳಾಪಟ್ಟಿಯಂ 1.11.2025ಕ್ಕೆ ಅನ್ವಯವಾಗುವಂತೆ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ, ದಿನಾಂಕ ನ.25 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ನ. 25 ರಿಂದ ಡಿ. 10 ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ, ಜಿಬಿಎ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 18,496 ಮತದಾರರು ಇದ್ದಾರೆ ಎಂದು ಮಹೇಶ್ವರ್ ರಾವ್ ಅವರು ಇಂದು ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣೆ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ರವರು ಮಾತನಾಡಿ ಅಂತಿಮ ಪರಿಷ್ಕರಣೆಯಲ್ಲಿ ತಪ್ಪಿಹೋದ ಅರ್ಹ ಶಿಕ್ಷಕರು ಅಭ್ಯರ್ಥಿಗಳ ನಾಮನಿರ್ದೇಶನದ ಕೊನೆಯ ದಿನಾಂಕದವರೆಗೆ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದಾಗಿ ಹಾಗೂ ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯುವುದಾಗಿ ತಿಳಿಸಿದರು.
ಈ ವೇಳೆ ವಿವಿಧ ವಿಭಾಗಗಳ ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಕೈ ಅಭ್ಯರ್ಥಿ ಘೋಷಣೆ
ಮುಂದಿನ ನವಂಬರ್ ವೇಳೆಗೆ ತೆರವಾಗಲಿರುವ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರಲ್ಲಿ ಮೂರು ಮಂದಿ ಮಾಜಿ ವಿಧಾನ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡಲಾಗಿದ್ದು, ಒಂದು ಕ್ಷೇತ್ರಕ್ಕೆ ಹೊಸಬರಿಗೆ ಮಣೆ ಹಾಕಲಾಗಿದೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ.ಸಂಕನೂರು, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರರಾದ ಚಿದಾನಂದ ಎಂ.ಗೌಡ, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶಿಲ್ ನಮೋಶಿ, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪುಟ್ಟಣ್ಣ ಸದಸ್ಯರಾಗಿದ್ದಾರೆ. 2026ರ ನವೆಂಬರ್ 11ಕ್ಕೆ ಈ ನಾಲ್ವರ ಅವಧಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮೊದಲೇ ಚುನಾವಣೆ ನಡೆದು ವಿಧಾನ ಪರಿಷತ್ ಸದಸ್ಯರ ಆಯ್ಕೆಯಾಗಬೇಕಿದೆ.
ಎಸ್.ವಿ.ಸಂಕನೂರು ವಿರುದ್ಧ ಹುಬ್ಬಳ್ಳಿ-ಧಾರವಾಡ ಭಾಗದ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮೋಹನ್ ಲಿಂಬೆಕಾಯಿ ಅವರನ್ನು ಕಣಕ್ಕಿಳಿಸುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ ಮಧ್ಯ ಕರ್ನಾಟಕ ಭಾಗದ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶಶಿಹುಲಿಕುಂಟೆಮಠ ಅವರನ್ನು, ಕಲ್ಬುರ್ಗಿ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ವ್ಯಾಪ್ತಿಯ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಎದುರು, ಶರಣಪ್ಪ ಮಟ್ಟೂರ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುತ್ತಿದೆ. ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಪುಟ್ಟಣ್ಣ ಹಾಲಿ ಸದಸ್ಯರಾಗಿದ್ದು, ಅವರ ಮರು ಸ್ಪರ್ಧೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದೇ ತಿಂಗಳಲ್ಲಿ ಮೂರು ಬಾರಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಜೊತೆ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿದ್ದರು. ಅಂತಿಮವಾಗಿ ಇಂದು ನಾಲ್ಕು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
