ಬೆಂಗಳೂರು, ಜೂ.6-ನೈರುತ್ಯ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೆಲವೆಡೆ ಭಾರಿ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ 14 ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಜೂನ್ 9 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಕರ್ನಾಟಕ ಭಾಗದಲ್ಲಿ ಜೂ. 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂನ್ 8 ರಿಂದ 11 ರವರೆಗೆ ಕೃಷ್ಣಾ ನದಿಯ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆಗಳಲ್ಲಿ ಮಳೆಯಾಗಲಿದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,ಬೆಳಗಾವಿ ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.