ಬೆಂಗಳೂರು,ಜೂ.6 – ರಾಜ್ಯದಲ್ಲಿ ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹಳದಿ ಮುನ್ನೆಚ್ಚರಿಕೆ (ಯಲ್ಲೋ ಅಲರ್ಟ್)ಯನ್ನು ಹವಾಮಾನ ಇಲಾಖೆ ನೀಡಿದೆ.
ನಿನ್ನೆ ರಾಜ್ಯದೆಲ್ಲೆಡೆ ಮಳೆಯಾಗಿದ್ದು, ಬೆಳಗಾವಿ, ಬಾಗಲಕೋಟೆಯಲ್ಲಿ 9 ಸೆ.ಮೀ. ಮಳೆಯಾಗಿದೆ. ಯಾದಗಿರಿ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಮೇಲೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುತ್ತಿದೆ, ಇದೇ ರೀತಿ ಇನ್ನೂ ಒಂದು ವಾರ ಮಳೆ ಮುಂದುವರೆಯಬಹುದಾಗಿದೆ. ಜೂ.10ರವರೆಗೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ.
ಹವಾಮಾನ ಮುನ್ಸೂಚನೆ ಪ್ರಕಾರ ಬೆಳಗಾವಿ, ವಿಜಯಪುರ, ಕೊಪ್ಪಳ. ಗದಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಆದರೆ. ಕೆಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ ಎಂದಿದ್ದಾರೆ.ಒಮೊಮೆ ಬಲವಾದ ಮೇಲೈಗಾಳಿ ಬೀಸಲಿದೆ. ಗಂಟೆಗೆ 40 ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಅವರು ಹೇಳಿದ್ದಾರೆ.