ನವದೆಹಲಿ,ಜೂ.10- ಜಮ್ಮುಕಾಶ್ಮೀರ ಶಿವಖೋಡಿ ದೇವಸ್ಥಾನದ ಬಳಿ ಭಕ್ತರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಮಾಹಿತಿ ಪಡೆದುಕೊಂಡಿದ್ದು, ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳು ಮತ್ತು ನೆರವು ನೀಡಲು ಸೂಚಿಸಿದ್ದಾರೆ.
ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.ಅಲ್ಲದೆ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಅವರು ಸೂಚನೆಗಳನ್ನು ನೀಡಿದ್ದಾರೆ. ಈ ಹೇಯ ಕೃತ್ಯದ ಹಿಂದೆ ಇರುವವರನ್ನು ಆದಷ್ಟು ಬೇಗ ಶಿಕ್ಷಿಸುವಂತೆ ನಿರ್ದೇಶನ ನೀಡಿದ್ದಾರೆ ಎಂದು ಜಮ್ಮುಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಜಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಈ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಖೋಡಿಯಿಂದ ಕತ್ರಾಗೆ ತೆರಳುತ್ತಿದ್ದ ಬಸ್ ಮೇಲೆ ಉಗ್ರರು ಸುಮಾರು 30ರಿಂದ 40 ಸುತ್ತು ಗುಂಡು ಹಾರಿಸಿದ್ದರು. ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಸ್ ಚಾಲಕನಿಗೆ ಬುಲೆಟ್ ತಗುಲಿದ್ದು, ಇದರ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡು ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ.
ಬಸ್ ಕಂದಕಕ್ಕೆ ಬಿದ್ದ ಪರಿಣಾಮ 10 ಮಂದಿ ಯಾತ್ರಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ನಾರಾಯಣ ಆಸ್ಪತ್ರೆ ಮತ್ತು ರಿಯಾಸಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರಪ್ರದೇಶದ ಹತ್ರಾಸ್‌ನಿಂದ ಬಂದ ಬಸ್‌ನೊಂದು ರಸ್ತೆಯಿಂದ ಹೊರಬಿದ್ದು ನೆರೆಯ ಅಖ್ನೂರ್ ಜಿಲ್ಲೆಯಲ್ಲಿ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 9 ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 22 ಯಾತ್ರಾರ್ಥಿಗಳು ಪ್ರಾಣ ಕಳೆದುಕೊಂಡು, 57 ಮಂದಿ ಗಾಯಗೊಂಡ 10 ದಿನಗಳ ನಂತರ ಈ ಘಟನೆ ನಡೆದಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಯಾಣಿಸುತ್ತಿದ್ದ ಬಸ್ ಪರ್ವತದ ರಸ್ತೆಯಿಂದ 300 ಅಡಿಗಳಷ್ಟು ಬೆಟ್ಟದಿಂದ ದೋಡಾ ಜಿಲ್ಲೆಯ ಮತ್ತೊಂದು ರಸ್ತೆಗೆ ಉರುಳಿದ ನಂತರ ಕನಿಷ್ಠ 39 ಪ್ರಯಾಣಿಕರು ಮೃತಪಟ್ಟು 17 ಮಂದಿ ಗಾಯಗೊಂಡಿದ್ದರು.
ಸ್ಥಳದಲ್ಲಿ ಶೋಧಕಾರ್ಯ: ಭಯೋತ್ಪಾದಕರು ಬಸ್ ಮೇಲೆ ದಾಳಿ ಮಾಡಿದ ನಂತರ ಭಾರತೀಯ ಸೇನೆಯು ರಿಯಾಸಿಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಉಗ್ರರು ಪಾಕಿಸ್ತಾನ ಮೂಲದವರಾಗಿದ್ದಾರೆ ಎಂಬುದು ತಿಳಿದುಬಂದಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಕೂಡ ಸ್ಥಳಕ್ಕೆ ಆಗಮಿಸಿದೆರಿಯಾಸಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದು ಉಗ್ರರ ಕುಕೃತ್ಯವಾಗಿರುವುದರಿಂದ ಬಸ್ ಮೇಲೆ ದಾಳಿ ನಡೆಸಿದ ಸ್ಥಳಕ್ಕೆ ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ತಂಡ ಆಗಮಿಸಿದೆ. ಈಗ ಡ್ರೋನ್ ಮೂಲಕ ಇಡೀ ಕಾಡನ್ನು ಸುತ್ತುವರೆಯಲಾಗಿದೆ, ಅಲ್ಲಿ ಎಲ್ಲಾದರೂ ಉಗ್ರರ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ಲಭ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರಪತಿ ಖಂಡನೆ: ಯಾತ್ರಿಕರ ಮೇಲೆ ಉಗ್ರರ ದಾಳಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಖಂಡಿಸಿದ್ದಾರೆ. ಜಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ನಡೆದ ಭಯೋತ್ಪಾದಕರ ದಾಳಿಯಿಂದ ನಾನು ದುಃಖಿತನಾಗಿದ್ದೇನೆ. ಈ ಕ್ರೂರ ಕೃತ್ಯವು ಮಾನವೀಯತೆಯ ವಿರುದ್ಧದ ಅಪರಾಧವಾಗಿದೆ ಮತ್ತು ಇದನ್ನು ಪ್ರಬಲ ಪದಗಳಲ್ಲಿ ಖಂಡಿಸಬೇಕು. ಸಂತ್ರಸ್ತರ ಕುಟುಂಬಗಳೊಂದಿಗೆ ರಾಷ್ಟ್ರ ನಿಂತಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.