Sunday, October 6, 2024
Homeರಾಜ್ಯಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ.14- ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆಗಳನ್ನು ಜಾರಿ ಮಾಡಲು ಅನುವಾಗುವಂತೆ ಜು.15 ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5 ಸಾವಿರ ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜು. 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು, ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದು ಆದೇಶಿಸಿದರು.

ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು, ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು.

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಲಾಯಿತು.ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಬೇಕು. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್‌ ಜಲಾಶಯಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್‌, ಈಶ್ವರ್‌ ಖಂಡ್ರೆ, ಜಮೀರ್‌ ಅಹಮದ್‌ ಖಾನ್‌, ಶರಣಬಸಪ್ಪ ದರ್ಶನಾಪೂರ, ಎನ್‌.ಎಸ್‌‍. ಭೋಸರಾಜು, ಶಿವರಾಜ್‌ ತಂಗಡಗಿ, ಡಿ.ಸುಧಾಕರ್‌, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

RELATED ARTICLES

Latest News