ಹುಬ್ಬಳ್ಳಿ,ಜೂ.20- ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ಬಿಜೆಪಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹದ್ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟೋಲ್ ಬೆಲೆಯನ್ನು ಲೀಟರ್‌ಗೆ 65 ರಿಂದ 110 ರೂ. ಗೆ ಹೆಚ್ಚಿಸಿದ್ದು ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 400 ರಿಂದ 1200 ರೂ. ಗೆ ಏರಿಕೆ ಮಾಡಿದ್ದು ಬಿಜೆಪಿ ಸರ್ಕಾರ. ಆಗ ಬಿಜೆಪಿಯವರು ಪ್ರತಿಭಟನೆ ಮಾಡಿರಲಿಲ್ಲ. ಈಗ ಬಿಜೆಪಿಯವರ ಪ್ರತಿಭಟನೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಉದ್ದೇಶ ಹೊಂದಿದೆ ಎಂದರು.
ಕಾಂಗ್ರೆಸ್ ಪಕ್ಷ ಚುನಾವಣೆ ಉದ್ದೇಶಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ನೀಡಿರಲಿಲ್ಲ. ಒಂದು ವರ್ಷದ ಅವಧಿಯಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಅಥವಾ ಈಗಿರುವ ಲಾನುಭವಿಗಳ ಸಂಖ್ಯೆ ಯನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ಕಾಂಗ್ರೆಸ್ ಶಾಸಕರ ಹೇಳಿಕೆ ವೈಯಕ್ತಿಕವಾದುದು. ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದರು.’
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಆರೋಪಿಗಳನ್ನು ರಕ್ಷಿಸಬೇಕೆಂದು ಯಾವ ಸಚಿವರೂ ಒತ್ತಡ ತಂದಿಲ್ಲವೆಂದು ಹಾಗೂ ತಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲವೆಂದು ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲಸದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ ಎಂದರು.ಸದಾನಂದ ಡಂಗನವರ, ಚಂದ್ರಶೇಖರ್ ಜುಟ್ಟಲ್ ಮುಂತಾದವರು ಇದ್ದರು.