ಬೆಂಗಳೂರು, ಜೂ.24- ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಧಾರವಾಡ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚೇತರಿಕೆ ಕಂಡಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗಿಲ್ಲ.
ಚದುರಿದಂತೆ ಕೆಲವೆಡೆ ಮಳೆಯಾಗಿರುವುದನ್ನು ಹೊರತುಪಡಿಸಿದರೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿಲ್ಲ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಉತ್ತಮ ಮಳೆಯಾಗಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ, ಜೂ.27 ರಂದು ರಾಜ್ಯದಲ್ಲಿ ಮುಂಗಾರು ಪ್ರಬಲವಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ.
ಅರಬ್ಬೀ ಸಮುದ್ರದಲ್ಲಿ ಟ್ರಪ್ ನಿರ್ಮಾಣವಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಆದರೆ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಜೂ.1 ರಿಂದ ಈತನಕ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಳನಾಡಿನಲ್ಲಿ ಮಾತ್ರ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಾಗುವ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ನಿರ್ದೇಶನ ನೀಡಿದೆ.