ಬೆಂಗಳೂರು, ಜೂ.26- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ಹವಾಮಾನ ಮುನ್ಸೂಚನೆ ಪ್ರಕಾರ, ಜೂನ್ ತಿಂಗಳ ಅಂತ್ಯದವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ಟ್ರಬ್ ನಿರ್ಮಾಣವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲವೆಡೆ ಹೊರತುಪಡಿಸಿ ರಾಜ್ಯದಲ್ಲಿ ಭಾರಿ ಮಳೆಯಾಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಭಾರಿ ಮಳೆ ಮುನ್ನೆಚ್ಚರಿಕೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಕೆಲವೆಡೆ 2 ವಾರಗಳಿಂದಲೂ ಮಳೆಯಾಗಿಲ್ಲ. ಕೆಲವೆಡೆ ಮಾತ್ರ ಉತ್ತಮ ಮಳೆಯಾಗಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.ಮೋಡದ ಜೊತೆಗೆ ಬಲವಾದ ಮೇಲೈ ಗಾಳಿ ಬೀಸುತ್ತಿದೆ. ಹೀಗಾಗಿ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ ಎಂದು ತಜ್ಞರು ಹೇಳಿದ್ದಾರೆ.