Friday, November 22, 2024
Homeರಾಜಕೀಯ | Politicsರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..?

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..?

ಬೆಂಗಳೂರು,ಜು.1-ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕರೆತರುವ ಪ್ರಯತ್ನ ಸದ್ದಿಲ್ಲದೆ ನಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸೊಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ.

ಇನ್ನು ಪಕ್ಷದಲ್ಲಿ ಪ್ರಾಥಮಿಕ ಹಂತದಲ್ಲಿ ಮಾತ್ರ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್‌‍ಗೆ ಠಕ್ಕರ್‌ ಕೊಡಲು ಬಿಜೆಪಿ ರಣತಂತ್ರ ರೂಪಿಸಿದೆ. ಅಂತಿಮವಾಗಿ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕೆಂದು ಸೂಚನೆ ನೀಡಲಾಗಿದೆ.

ಚನ್ನಪಟ್ಟಣಕ್ಕೆ ಅನುಸೂಯ?:
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಭದ್ರಕೋಟೆ ಎಂದು ಹೇಳಲಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜತೆಗೆ ಒಕ್ಕಲಿಗ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್‌ರವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ನಿಂದ ಡಿ.ಕೆ.ಶಿವಕುಮಾರ್‌ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.
ಈಗಾಗಲೇ ಬೆಂಗಳೂರು ಗ್ರಾಮಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.

ಒಂದು ವೇಳೆ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ಹಾಗೂ ಕಾಂಗ್ರೆಸ್‌‍ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ.

ಅನಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನುಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಷ್ಟೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್‌‍.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌‍ ಗೆಲುವು ಕಾಣಲೇಬೇಕು. ಕ್ಷೇತ್ರದಲ್ಲಿ ಜೆಡಿಎಸ್‌‍ ಉಳಿಸಿಕೊಳ್ಳುವುದು ಎಚ್‌ಡಿಕೆಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಶ್ರೀರಾಮುಲು, ಭರತ್‌ ಬೊಮಾಯಿಗೆ ಸಿಗಲಿದೆಯೇ ಟಿಕೆಟ್‌?:
ಇನ್ನು ಮಾಜಿ ಮುಖ್ಯಮಂತ್ರಿ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್‌ ಬೊಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ.

ಕುಟುಂಬದವರಿಗೆ ಟಿಕೆಟ್‌ ಕೊಟ್ಟರೆ ಬೊಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ.

ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ ಬದಲಿಗೆ ತಮ ಆಪ್ತ ಕೆ.ಎಸ್‌‍.ದಿವಾಕರ್‌ ಬಾಬುಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅಖಾಡಕ್ಕಿಳಿದಿದ್ದಾರೆ.

RELATED ARTICLES

Latest News