ಬೆಂಗಳೂರು, ಜು.5-ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೈಸೂರಿನ ಮೂಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಮಂಡ್ಯದಲ್ಲಿ ಜನತಾ ದರ್ಶನ ಆರಂಭಿಸುವ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.ಇಷ್ಟು ದಿನಗಳ ಕಾಲ ಹೊರಗೆ ಬಾರದ ಮೂಡಾ ಹಗರಣ ಈಗ ಬೆಳಕಿಗೆ ಬಂದಿರುವುದು ಏಕೆ? ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿಯ ಮೇಲೆ ಟವೆಲ್ ಹಾಕಿರುವವರ ಪಾತ್ರವಿದೆ ಎಂದು ಆರೋಪಿಸಿದ್ದಾರೆ.
ಸಿಡಿ ಫ್ಯಾಕ್ಟರಿ ಬಂದ್ ಆಯ್ತು. ಮೂಡಾ ಫ್ಯಾಕ್ಟರಿ ಶುರುವಾಯ್ತು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಮೂಡಾ ಹಗರಣ ಹೊರಬರಲು ಕಾಂಗ್ರೆಸ್‌ನವರು ಒಳಗೇ ಕುಮಕ್ಕು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಮಾಹಿತಿ ಇದೆ.
ಮುಖ್ಯಮಂತ್ರಿ ಅವರ ಪತ್ನಿಗೆ ಆ ಜಾಗ ಹೇಗೆ ಬಂದಿದೆ ಎಂಬುದೂ ಗೊತ್ತಿದೆ ಎಂದಿದ್ದಾರೆ.ಸುಮಾರು 62 ಕೋಟಿ ರೂ. ಪರಿಹಾರ ಕೇಳುವ ಮುಖ್ಯಮಂತ್ರಿ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ.