Sunday, October 6, 2024
Homeರಾಜ್ಯನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು ಜು 8– ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ, ಕರ್ತವ್ಯ ಲೋಪಕ್ಕೆ ಇನ್ನೂ ಮುಂದೆ ಕೆಳ ಹಂತದ ಅಧಿಕಾರಿಗಳ ಜೊತೆಗೆ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿವರ್ಹಣಾಧಿಕಾರಿಗಳ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ ಹಾಗೂ ಸಿಇಒಗಳು ಜಿಲ್ಲೆಯ ಮಾಹಿತಿಯನ್ನು ಅಂಗೈನಲ್ಲಿ ಇಟ್ಟುಕೊಂಡು ಉತ್ಸಾಹ, ಕ್ರಿಯಾಶೀಲತೆ ಹಾಗೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು, ಜಿಲ್ಲೆಯ ಅಭಿವೃದ್ಧಿಯಾಗಲು ಸಾಧ್ಯ ಎಂದರು.

ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಜಿಲ್ಲೆಯ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು ಎಂದು ಹೇಳಿದರು.

ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಇಒ, ಎಸ್ಪಿ ಅಧಿಕಾರಿಗಳ ಪಾತ್ರ ದೊಡ್ಡದು. ಈ ಮೂರು ಜನರು ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದರೆ ಅಭಿವೃದ್ಧಿ ವೇಗ ಪಡೆಯಲು ಸಾಧ್ಯ ಎಂದರು.

ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ. ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ.

ಫ್ರೇಸರ್‌ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗಾಯಕ್‌ವಾಡ್‌, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್‌ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ.

ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ. ನಮ್ಮ ಜನರು ತಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮಿಂದ ಇದು ಸಾಧ್ಯವಿದೆ ಎಂದು ಹುರಿದುಂಬಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯ ಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಮುಂದೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು. 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ವಿಷಾದಿಸಿದರು.

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ . ಕರ್ನಾಟಕ ಗುಡ್‌ ಗೌರ್ನೆನ್‌್ಸನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ ಮೇಲಿದೆ ಎಂದರು.

ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ಸ್ಥಳೀಯವಾಗಿ ಸರಿಯಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಅರ್ಜಿಗಳು ತಮವರೆಗೂ ಬರುತ್ತಿರಲಿಲ್ಲ. ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದೂಡಿ ಮುಚ್ಚಳಿಕೆ ಕೊಟ್ಟು ಕೈ ತೊಳೆದುಕೊಳ್ಳಬಾರದು, ಸಮಸ್ಯೆಗಳಿಗೆ ಪರಿಹಾರ ಕೊಡಿಸಬೇಕು.

ಅರ್ಜಿಯನ್ನು ಮುಂದೂಡಿಕೆ ಮಾಡಲು ಡಿಸಿಗಳು, ಸಿಇಒಗಳು ಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿಯಾಗದೆ, ಗುಣಾತ್ಮಕವಾಗಿ ವಿಲೇವಾರಿ ಆಗದಿದ್ದರೆ ನಿಮ ವಿರುದ್ಧ ಕ್ರಮ ಖಚಿತ ಎಂದು ಹಿರಿಯ ಅಧಿಕಾರಿಗಳಿಗೆ ಎಚ್ಚರಿಸಿದರು.

ತಹಶೀಲ್ದಾರ್‌, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ ಡಿಸಿಗಳು, ಸಿಇಒಗಳು ಗಮನ ಹರಿಸಬೇಕು ಎಂದು ಆದೇಶಿಸಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ ಆರ್‌ಆರ್‌ಟಿ (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ. ಡಿಸಿಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. ಡಿಸಿಗಳೇ ಬಾಕಿ ಉಳಿಸಿಕೊಂಡರೆ ಎಸಿಗಳು ಮತ್ತು ತಹಶೀಲ್ದಾರ್‌ ಗಳಿಗೆ ಡಿಸಿಗಳು ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು.

ಕೆಲವು ಡಿಸಿಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಇದೇ ರೀತಿ ಕೆಲಸ ಮಾಡಲು ಉಳಿದ ಅಧಿಕಾರಿಗಳಿಗೆ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಯವರು, ಜನರನ್ನು ಅನಗತ್ಯವಾಗಿ ಅಲೆದಾಡಿಸುವುದು ಹಾಗೂ ಕೆಲಸ ಮಾಡಿಕೊಡದೆ ಇರುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್‌ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು ಎಂದರು.

RELATED ARTICLES

Latest News