ಹುಬ್ಬಳ್ಳಿ,ಜು.8- ರಾಜ್ಯ ಸರ್ಕಾರ ಡೆಂಘೀ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
ನಗರದ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಡೆಂಘೀಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ, ಪರೀಕ್ಷೆಗೆ ಪ್ರತ್ಯೇಕವಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.
ಆರೋಗ್ಯ ಸಚಿವರು ರಾಜಧಾನಿ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಇರುವ ಆರೋಗ್ಯ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ಡೆಂಘೀ ಮಾರಕ ಕಾಯಿಲೆಯಾಗಿದ್ದು, ನಿಯಂತ್ರಿಸದಿದ್ದರೆ ಸಾರ್ವಜನಿಕರು ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ.
ಸಾವು-ನೋವುಗಳು ಹೆಚ್ಚಾಗುತ್ತವೆ. ಕೂಡಲೇ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಘೀ ಕಾಯಿಲೆಯಿಂದ ಹಲವರು ಸಾವನ್ನಪ್ಪಿದರೆ, ಸಾಕಷ್ಟು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸರ್ಕಾರ ಡೆಂಘೀ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.