Sunday, October 6, 2024
Homeಆರೋಗ್ಯ / ಜೀವನಶೈಲಿಡೆಂಘೀ ಜ್ವರದ ಭಯಬೇಡ, ಇರಲಿ ಎಚ್ಚರ

ಡೆಂಘೀ ಜ್ವರದ ಭಯಬೇಡ, ಇರಲಿ ಎಚ್ಚರ

ಮಳೆಗಾಲ ಬಂತೆಂದರೆ ಒಂದು ರೀತಿಯಲ್ಲಿ ಖುಷಿ ನೀಡುತ್ತದೆ. ಆದರೆ ಎಲ್ಲೆಂದರಲ್ಲಿ ನೀರು ನಿಂತುಕೊಂಡು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಇದರಿಂದ ಹಲವಾರು ರೋಗಗಳು ಬರುತ್ತವೆ. ಕಲುಷಿತ ನೀರನ್ನು ಸೇವನೆ ಮಾಡುವುದರಿಂದ ಸಹ ರೋಗಗಳು ಬರುತ್ತವೆ. ಹೀಗಾಗಿ ನಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇತ್ತೀಚೆಗೆ ಡೆಂಘೀ ಜ್ವರ ಪ್ರಕರಣಗಳು ದಿನದಿನಕ್ಕೆ ಹೆಚ್ಚಳವಾಗುತ್ತಿವೆ. ಡೆಂಗ್ಯೂ ನಿಯಂತ್ರಣಕ್ಕೆ ನಾವು ಕೂಡ ನಮ ಕೈಲಾದ ಕ್ರಮಗಳನ್ನು ಕೈಗೊಳ್ಳ ಬೇಕಿರುವುದು ಅವಶ್ಯಕವಾಗಿದೆ.

ಡೆಂಘೀ ಜ್ವರ ಎಂದರೇನು ? ಅದು ಹೇಗೆ ಹರಡುತ್ತದೆ ?
ಡೆಂಘೀ ಜ್ವರ ವೈರಸ್‌‍ನಿಂದ ಉಂಟಾಗುವ ಖಾಯಿಲೆಯಾಗಿದೆ. ಇದು ಸೋಂಕು ಹೊಂದಿದ ಈಡಿಸ್‌‍ ಈಜಿಪ್ಟೆ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದ ಡೆಂಘೀ ಹರಡಲಿದೆ.

ಡೆಂಘೀ ರೋಗದ ಮುಖ್ಯ ಲಕ್ಷಣಗಳು ಯಾವುವು?
ಡೆಂಘೀ ಜನರಿಗೆ ಹರಡಿದಾಗ ದೇಹದ ಮೇಲೆ ಕೆಲವು ಬದಲಾವಣೆಗಳು ಆಗುತ್ತವೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ರೋಗದ ಪ್ರಮುಖ ಲಕ್ಷಣಗಳೆಂದರೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.

ಡೆಂಘೀ ರೋಗಕ್ಕೆ ಚಿಕಿತ್ಸೆ ಏನು?
ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಡೆಂಘೀ ರೋಗದ ನಿಯಂತ್ರಣ ಹೇಗೆ?
ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಘೀ ರೋಗ ಹತೋಟೆಗೆ ತರಲು ಇರುವ ಕ್ರಮವಾಗಿದೆ. ಈ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್‌ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮು, ಬ್ಯಾರೆಲ್‌, ಮಣ್ಣಿನ ಮಡಿಕೆ, ಉಪಯೋಗಿಸದ ಒರಳು ಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ, ಈ ರೀತಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಶೇಖರಣೆ ಆಗದಂತೆ ಕ್ರಮಗಳನ್ನು ಕೈಗೊಳ್ಳಬೇಕು.

ಡೆಂಘೀ ಬರದಂತೆ ಮುಂಜಾಗ್ರತಾ ಕ್ರಮಗಳು
ಎಲ್ಲಾ ನೀರಿನ ತೊಟ್ಟಿ, ಡ್ರಮು, ಬ್ಯಾರೆಲ್‌ ಇತ್ಯಾದಿಗಳನ್ನು ವಾರಕೊಮೆ ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದ ತೊಟ್ಟಿ ಮುಂತಾದವುಗಳನ್ನು ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳದಿಂದ ಮುಚ್ಚಬೇಕು.

ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳು ಕಚ್ಚದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಡೆಂಘೀ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಸಮೀಪದ ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರದಲ್ಲಿ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬಹುದು. ಡೆಂಘೀ ರೋಗ ಕೆಲವೇ ಪ್ರಕರಣದಲ್ಲಿ ತೀವ್ರ ರಕ್ತಸ್ರಾವವಾದಲ್ಲಿ ರಕ್ತದ ಒತ್ತಡ ಕಡಿಮೆ ಆದಲ್ಲಿ ಐವಿ ದ್ರಾವಣ, ಪ್ಲೇಟೆಟ್‌ ನೀಡಬೇಕಾಗಬಹುದು. ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಒಟ್ಟಿನಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ, ಡೆಂಘೀ ಜ್ವರದಿಂದ ಪಾರಾಗಬಹುದು.

RELATED ARTICLES

Latest News