ಬೆಂಗಳೂರು,ಜು.12– ಬಹುಕೋಟಿ ಹಣ ಅಕ್ರಮ ವರ್ಗಾವಣೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರು ಇಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾದರು.
ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹಗರಣದ ಬಗ್ಗೆ ದದ್ದಲ್ ಅವರಿಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿಗಳನ್ನು ಪಡೆದುಕೊಂಡರು.
ಮಂಗಳವಾರ ಮುಂಜಾನೆ ಇ.ಡಿ ಅಧಿಕಾರಿಗಳು ದದ್ದಲ್ ಅವರ ಬೆಂಗಳೂರಿನ ಯಲಹಂಕದ ನಿವಾಸ, ಕಚೇರಿ ಹಾಗೂ ರಾಯಚೂರಿನ ನಿವಾಸ ಸೇರಿದಂತೆ ಹಲವೆಡೆ ದಾಳಿ ಮಾಡಿ ಶೋಧ ನಡೆಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಶಾಸಕರು, ಆಪ್ತರು ಸೇರಿದಂತೆ ಹಲವರನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಶಾಸಕ ದದ್ದಲ್ ಅವರು ಈ ಪ್ರಕರಣದ ಸಂಬಂಧ ಸೋಮವಾರ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು.
ಮಂಗಳವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್ಐಟಿ ನೋಟೀಸ್ ನೀಡಿತ್ತು. ಆದರೆ ಮಂಗಳವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಎಸ್ಐಟಿ ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ದದ್ದಲ್ ಅವರಿಂದ ಎಸ್ಐಟಿ ಅಧಿಕಾರಿಗಳು ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.