ಬೆಂಗಳೂರು,ಜು.14- ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ಅವರು ನೀಡಿದ ಹೇಳಿಕೆಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಆಶ್ವಾಸನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಡೇರಿಸುತ್ತಾ ಬರುತ್ತಿದ್ದಾರೆ.
ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ.
ಇಂಥ ಹೇಳಿಕೆಗೆ ಕಡಿವಾಣ ಹಾಕಲು ಮನವಿ:ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಹೇಳಿಕೆಗಳಿಗೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಅವರು ಮನವಿ ಮಾಡಿದ್ದಾರೆ.