ಬೆಂಗಳೂರು,ಜು.19-ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆಶ್ವಾಸನೆ ನೀಡಿದರು.
ವಿಧಾನಪರಿಷತ್‌ನಲ್ಲಿ ಸದಸ್ಯ ನಾಗರಾಜ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ ಒಟ್ಟು 15 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದೇವೆ. ಅನುದಾನ ಬಿಡುಗಡೆ ಮಾಡಬೇಕೆಂಬ ಒತ್ತಡವಿದೆ. ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು. ‘
ಸಮುದಾಯಕ್ಕೆ ಮೀಸಲಿಟ್ಟ ಹಣ ಇನ್ನು ಬಿಡುಗಡೆಯಾಗದಿರಲು ಕೆಲವು ತಾಂತ್ರಿಕ ಕಾರಣಗಳು ತೊಡಕ್ಕಾಗಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಈ ಸಮುದಾಯದ ಬಗ್ಗೆ ಕಳಕಳಿ ಇರುವ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಬೇಡಿಕೆಯು ಇದೆ. ಶೀಘ್ರದಲ್ಲೇ ಇದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಸದಸ್ಯ ನಾಗರಾಜ್ ಅವರ ಮನವಿಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದೆ. ಮುಖ್ಯಮಂತ್ರಿಗಳು ಕೂಡ ಸಂಬಂಧಪಟ್ಟವರ ಜೊತೆ ಚರ್ಚಿಸಿದ್ದಾರೆ. ಕೇಂದ್ರವು ಸ್ಪಂದಿಸುತ್ತದೆ ಎಂಬ ವಿಶ್ವಾಸವನ್ನು ತಂಗಡಗಿ ವ್ಯಕ್ತಪಡಿಸಿದರು.